ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಬಾಗಿಲು ಮುಚ್ಚುವ ಸ್ಥಿತಿಯಲ್ಲಿವೆ. ಇವುಗಳ ಅಬಿವೃದ್ಧಿಗೆ ಸರ್ಕಾರ ಅನುದಾನ ನೀಡಬೇಕು ಎಂದು ರಾಜ್ಯ ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರೂಪ್ಸ) ಮತ್ತು ಕಲ್ಯಾಣ ಕರ್ನಾಟಕ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ಒತ್ತಾಯಿಸಿವೆ.
‘ಕಲ್ಯಾಣ ಕರ್ನಾಟಕ ಭಾಗದಲ್ಲಿ 1947 ರಲ್ಲಿ ಇದ್ದ ಸ್ಥಿತಿಯೇ ಈಗಲೂ ಇದೆ. 371ಜೆ ಅಡಿ ಸೌಲಭ್ಯ ಘೋಷಿಸಿ ಏಳು ವರ್ಷಗಳಾದರೂ ಶಾಲೆಗಳ ಪರಿಸ್ಥಿತಿ ಮಾತ್ರ ಸುಧಾರಿಸಿಲ್ಲ’ ಎಂದು ರೂಪ್ಸ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
‘ಈ ಭಾಗ 200 ವರ್ಷಗಳವರೆಗೆ ನಿಜಾಮರ ಆಡಳಿತಕ್ಕೆ ಒಳಪಟ್ಟಿತ್ತು. ಆಡು ಭಾಷೆ ಕನ್ನಡವಾಗಿದ್ದರೆ, ಆಡಳಿತ ಭಾಷೆ ಉರ್ದು ಆಗಿತ್ತು. ಉರ್ದು ಮತ್ತು ಕನ್ನಡದ ನಡುವಿನ ತಿಕ್ಕಾಟದಲ್ಲಿ ಈ ಭಾಗದ ಮಕ್ಕಳು ಶೈಕ್ಷಣಿಕವಾಗಿ ಹಿಂದುಳಿಯುವಂತಾಗಿದೆ’ ಎಂದರು.
‘371ಜೆ ಅಡಿಯಲ್ಲಿ ಖಾಸಗಿ ಶಾಲಾ ಸಂಸ್ಥೆಗಳಿಗೆ ಅನುದಾನ ನೀಡಬೇಕು. ಈ ಯೋಜನೆಯಡಿ ಈವರೆಗೆ ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳಿಗೆ ಒಂದು ರೂಪಾಯಿಯನ್ನೂ ನೀಡಿಲ್ಲ. ಅನುದಾನ ಕೊರತೆಯ ಕಾರಣ ಗುಣಮಟ್ಟದ ಶಿಕ್ಷಣ ಕೊಡಲು ಸಾಧ್ಯವಾಗುತ್ತಿಲ್ಲ’ ಎಂದು ಒಕ್ಕೂಟದ ಅಧ್ಯಕ್ಷ ಸುನೀಲ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.