ADVERTISEMENT

ಕನ್ನಡಿಗರಿಗೆ ಉದ್ಯೋಗ, ಶಾಲೆಗಳ ಸಬಲೀಕರಣ: ಕನ್ನಡ ಪರ ಸಂಘಟನೆಗಳ ಪ್ರಮುಖರ ಸಲಹೆ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಕನ್ನಡ ಪರ ಸಂಘಟನೆಗಳ ಪ್ರಮುಖರ ಸಲಹೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2024, 18:55 IST
Last Updated 7 ಜುಲೈ 2024, 18:55 IST
ಪುರುಷೋತ್ತಮ ಬಿಳಿಮಲೆ ಅವರು ಕನ್ನಡ ಪರ ಸಂಘಟನೆಗಳ ಪ್ರಮುಖರ ಜತೆಗೆ ಸಭೆ ನಡೆಸಿದರು. ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ ಉಪಸ್ಥಿತರಿದ್ದರು.  
ಪುರುಷೋತ್ತಮ ಬಿಳಿಮಲೆ ಅವರು ಕನ್ನಡ ಪರ ಸಂಘಟನೆಗಳ ಪ್ರಮುಖರ ಜತೆಗೆ ಸಭೆ ನಡೆಸಿದರು. ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ ಉಪಸ್ಥಿತರಿದ್ದರು.     

ಬೆಂಗಳೂರು: ‘ಕೇಂದ್ರೀಯ ಉದ್ದಿಮೆಗಳು ಮತ್ತು ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ‌ಕನ್ನಡಿಗರಿಗೆ ಉದ್ಯೋಗ, ಸರೋಜಿನಿ ಮಹಿಷಿ ವರದಿ ಅನುಷ್ಠಾನ, ಸರ್ಕಾರಿ ಶಾಲೆಗಳ ಸಬಲೀಕರಣ ಹಾಗೂ ಕೇಂದ್ರೀಯ ವಿದ್ಯಾಲಯಗಳಲ್ಲಿ ಪ್ರಥಮ ಭಾಷೆಯಾಗಿ ಕನ್ನಡ ಬೋಧನೆಯಂತಹ ವಿಷಯಗಳನ್ನು ಕೈಗೆತ್ತಿಕೊಳ್ಳಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಕನ್ನಡ ಪರ ಸಂಘಟನೆಗಳ ಪ್ರಮುಖರು ಸಲಹೆ ನೀಡಿದ್ದಾರೆ. 

ಕನ್ನಡಪರ ಸಂಘಟನೆಗಳೊಂದಿಗೆ ಪ್ರಾಧಿಕಾರ ಇಲ್ಲಿ ಹಮ್ಮಿಕೊಂಡ ಸಮಾಲೋಚನೆ ಸಭೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಕನ್ನಡ ಅನುಷ್ಠಾನ ಹಾಗೂ ಕನ್ನಡಿಗರಿಗೆ ಇರುವ ಅವಕಾಶಗಳ ಬಗ್ಗೆ ಚರ್ಚಿಸಲಾಯಿತು. 

ಈ ವೇಳೆ ಮಾತನಾಡಿದ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ‘ಅಂಕಿ ಅಂಶಗಳನ್ನು ಗಮನಿಸಿದರೆ ಶೇ 66‌ ರಷ್ಟು ವೇಗದಲ್ಲಿ ಹಿಂದಿ ಭಾಷೆ ಬೆಳವಣಿಗೆ ಹೊಂದುತ್ತಿದೆ. ಪಂಜಾಬಿ ಭಾಷೆ ಶೇ 12ರಿಂದ ಶೇ 13 ರಷ್ಟು ವೇಗದಲ್ಲಿ ಬೆಳವಣಿಗೆಯಾಗುತ್ತಿದೆ. ಕರ್ನಾಟಕದ್ದೆ ಭಾಷೆಯಾದ ತುಳು ಶೇ 7 ರಷ್ಟು ವೇಗದಲ್ಲಿ ಬೆಳವಣಿಗೆ ಹೊಂದುತ್ತಿದೆ. ಆದರೆ, ರಾಜ್ಯದ ಅಧಿಕೃತ ಭಾಷೆಯಾದ ಕನ್ನಡ ಭಾಷೆಯ ಬೆಳವಣಿಗೆ ಶೇ 3.7 ರಷ್ಟಿದೆ’ ಎಂದು ಕಳವಳ ವ್ಯಕ್ತಪಡಿಸಿದರು.  

ADVERTISEMENT

‘ಸರೋಜಿನಿ ಮಹಿಷಿ ವರದಿ ನೀಡಿ ಹಲವು ವರ್ಷಗಳಾಗಿವೆ. ಆಗ ಐಟಿ–ಬಿಟಿ, ಬಹುರಾಷ್ಟ್ರೀಯ ಕಂಪನಿಗಳು ಇರಲಿಲ್ಲ. ಆದ್ದರಿಂದ ಆ ಕ್ಷೇತ್ರದಲ್ಲಿನ  ಉದ್ಯೋಗದ ಸಮಸ್ಯೆಗಳ ಬಗ್ಗೆ ಮಹಿಷಿ ವರದಿಯಲ್ಲಿ ಉಲ್ಲೇಖಿಸಿಲ್ಲ. ಹೀಗಾಗಿ, ಪ್ರಾಧಿಕಾರದಿಂದಲೇ ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಲಾಗಿದೆ. ಅದನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರಾಧಿಕಾರ ಕಾರ್ಯನ್ಮೋಖವಾಗಿದೆ’ ಎಂದು ಹೇಳಿದರು.

ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು ಮಾತನಾಡಿ, ‘ಪ್ರಾಧಿಕಾರ ಕೇವಲ ಕರ್ನಾಟಕದೊಳಗಿನ ಕನ್ನಡಿಗರ ಬಗ್ಗೆ ಮಾತ್ರವಲ್ಲದೇ ಹೊರನಾಡು, ಗಡಿನಾಡು ಕನ್ನಡಿಗರ ಸಮಸ್ಯೆಗಳ ಬಗ್ಗೆಯೂ ಗಮನ ಹರಿಸಬೇಕಿದೆ’ ಎಂದು ತಿಳಿಸಿದರು.

ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ ಶೆಟ್ಟಿ ಮಾತನಾಡಿ, ‘ಕನ್ನಡ ಪರ ಹೋರಾಟಗಾರರ ಮೇಲಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು’ ಎಂದು ಆಗ್ರಹಿಸಿದರು.

ಕಂಕಣ ಬಳಗದ ಕವಿರಾಜ್, ‘ಅಪಾರ್ಟ್‌ಮೆಂಟ್‌ ಮತ್ತು ಮಾಲ್‌ಗಳಲ್ಲಿ ಕನ್ನಡ ಬಳಕೆಗೆ ಆದ್ಯತೆ ನೀಡಬೇಕು’ ಎಂದು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.