ADVERTISEMENT

ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಎಚ್‌ಎಎಲ್‌ ನೇಮಕಾತಿ ಪ್ರಕ್ರಿಯೆ ಪರಿಶೀಲನೆ

ಎಚ್‌ಎಎಲ್ ಕೇಂದ್ರೀಯ ಕನ್ನಡ ಸಂಘದ ಪ್ರತಿನಿಧಿಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಭರವಸೆ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2024, 15:52 IST
Last Updated 8 ಅಕ್ಟೋಬರ್ 2024, 15:52 IST
ಎಚ್‌ಎಎಲ್‌ ನೇಮಕಾತಿಯಲ್ಲಿ ಕನ್ನಡಿಗರಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಒದಗಿಸುವಂತೆ ಎಚ್‌ಎಎಲ್ ಕೇಂದ್ರೀಯ ಕನ್ನಡ ಸಂಘದ ಪ್ರತಿನಿಧಿಗಳು ಪುರುಷೋತ್ತಮ ಬಿಳಿಮಲೆ ಅವರಿಗೆ ಮನವಿ ಸಲ್ಲಿಸಿದರು. ಸಂತೋಷ ಹಾನಗಲ್ಲ ಉಪಸ್ಥಿತರಿದ್ದರು
ಎಚ್‌ಎಎಲ್‌ ನೇಮಕಾತಿಯಲ್ಲಿ ಕನ್ನಡಿಗರಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಒದಗಿಸುವಂತೆ ಎಚ್‌ಎಎಲ್ ಕೇಂದ್ರೀಯ ಕನ್ನಡ ಸಂಘದ ಪ್ರತಿನಿಧಿಗಳು ಪುರುಷೋತ್ತಮ ಬಿಳಿಮಲೆ ಅವರಿಗೆ ಮನವಿ ಸಲ್ಲಿಸಿದರು. ಸಂತೋಷ ಹಾನಗಲ್ಲ ಉಪಸ್ಥಿತರಿದ್ದರು   

ಬೆಂಗಳೂರು: ಎಚ್‌ಎಎಲ್ (ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌) ಇತ್ತೀಚೆಗೆ ನಡೆಸಿದ ನೇಮಕಾತಿಯಲ್ಲಿ ಕನ್ನಡಿಗರನ್ನು ಕಡೆಗಣಿಸಿರುವುದು ಖಂಡನೀಯ. ಶೀಘ್ರದಲ್ಲೇ ಸಂಸ್ಥೆಗೆ ಭೇಟಿ ನೀಡಿ, ನೇಮಕಾತಿ ಪ್ರಕ್ರಿಯೆ ಕುರಿತು ಪರಿಶೀಲಿಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಎಚ್‌ಎಎಲ್ ಕೇಂದ್ರೀಯ ಕನ್ನಡ ಸಂಘದ ಪ್ರತಿನಿಧಿಗಳಿಗೆ ಭರವಸೆ ನೀಡಿದೆ.

ಮಂಗಳವಾರ ಇಲ್ಲಿ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ‘ಸಂಸ್ಥೆಯಲ್ಲಿ ಕನ್ನಡಿಗರ ಹಿತ ಕಾಯಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬದ್ಧವಾಗಿದೆ. ಸಂಸ್ಥೆಯಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಲಾಗುತ್ತಿದೆ ಎಂದು ಲಿಖಿತವಾಗಿ ಪ್ರಾಧಿಕಾರಕ್ಕೆ ತಿಳಿಸಿದ್ದ ಎಚ್‌ಎಎಲ್‌ ಅಧಿಕಾರಿಗಳು, ಈಗ ಸಂಸ್ಥೆಯ ನೇಮಕಾತಿಯಲ್ಲಿ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಕನ್ನಡಿಗರಿಗೆ ಉದ್ಯೋಗಾವಕಾಶವನ್ನು ನಿರಾಕರಿಸಿದ್ದಾರೆ. ಇದು ದಾರಿ ತಪ್ಪಿಸುವ ಪ್ರಯತ್ನವಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

‘ನಿಶ್ಚಿತ ಅವಧಿಯ ಉದ್ಯೋಗಾಂಕ್ಷಿಗಳಿಗೆ ಎಚ್ಎಎಲ್ ನಡೆಸಿರುವ ಲಿಖಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಮಾತ್ರ ನೀಡಿ, ಪ್ರಾದೇಶಿಕ ಭಾಷೆಯಾದ ಕನ್ನಡವನ್ನು ಕಡೆಗಣಿಸಿರುವುದು ಸರಿಯಲ್ಲ. ನೇಮಕಾತಿ ಪರೀಕ್ಷೆಯಲ್ಲಿ ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ಪ್ರಶ್ನೆ ಪತ್ರಿಕೆಗಳನ್ನು ನೀಡಬೇಕೆಂಬ ಹೊಸ ನಿಯಮವನ್ನು ರೂಪಿಸಲಾಗಿದೆಯೆ? ಸಂಸ್ಥೆಯ ನಡೆಯಿಂದ ಕನ್ನಡೇತರ ಅಭ್ಯರ್ಥಿಗಳು ಇಲ್ಲಿ ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ. ಇದು ತ್ರಿಭಾಷಾ ಸೂತ್ರದ ಉಲ್ಲಂಘನೆಯಷ್ಟೇ ಅಲ್ಲದೆ, ಒಕ್ಕೂಟ ವ್ಯವಸ್ಥೆಗೆ ಕೇಂದ್ರ ಸರ್ಕಾರ ನೀಡಿರುವ ಅಗೌರವ’ ಎಂದು ಹೇಳಿದರು.

ADVERTISEMENT

‘ಎಚ್‌ಎಎಲ್‌ನ ಕನ್ನಡ ವಿರೋಧಿ ಧೋರಣೆ ಸ್ಥಳೀಯರ ಉದ್ಯೋಗಾವಕಾಶವನ್ನು ಕಸಿದಿದೆ. ಸಂವಿಧಾನದ ಆಶಯದಂತೆ ಕೇಂದ್ರ ಸರ್ಕಾರದ ಉದ್ದಿಮೆಗಳು ಸ್ಥಳೀಯ ಭಾಷೆ, ಸಂಸ್ಕೃತಿಗಳಿಗೆ ಗೌರವ ನೀಡುವುದನ್ನು ರೂಢಿಸಿಕೊಳ್ಳಬೇಕು. ಕನ್ನಡಿಗರನ್ನು ಕಡೆಗಣಿಸಿರುವ ಬಗ್ಗೆ ಸಂಘಟಿತ ಹೋರಾಟ ನಡೆಸಬೇಕಿದೆ. ಅಗತ್ಯವಿದ್ದಲ್ಲಿ ಕಾನೂನು ಹೋರಾಟಕ್ಕೂ ಮುಂದಾಗಬೇಕು’ ಎಂದು ಸಂಘದ ಪ್ರತಿನಿಧಿಗಳಿಗೆ ಬಿಳಿಮಲೆ ಸೂಚಿಸಿದರು. 

ಸಭೆಯಲ್ಲಿ ಎಚ್‌ಎಎಲ್ ಕೇಂದ್ರೀಯ ಕನ್ನಡ ಸಂಘದ ಅಧ್ಯಕ್ಷ ಡಿ.ರಾಜೇಶ್, ಪ್ರಧಾನ ಕಾರ್ಯದರ್ಶಿ ದೇವರಾಜ್, ಸಂಘಟನಾ ಕಾರ್ಯದರ್ಶಿ ಜಯತೀರ್ಥ, ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.