ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣದ ಆರೋಪಿ ಮಹಿಳೆ ಎಸ್.ಜೀವಾ ಆತ್ಮಹತ್ಯೆಗೂ ಮುನ್ನ ಬರೆದ ಪತ್ರದ ನೈಜತೆ ತಿಳಿಯಲು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗುತ್ತಿದೆ.
ಮರಣಪತ್ರ ಬರೆದಿಟ್ಟು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿ ಜೀವಾ ಅವರ ಸಾವಿನ ಸಂಬಂಧ ಸಹೋದರಿ ಸಂಗೀತಾ ದೂರು ನೀಡಿದ್ದು, ಹಲವು ಆರೋಪಗಳನ್ನು ಮಾಡಿದ್ದಾರೆ.
ಸಾಯುವ ಮುನ್ನ ಅವರು ಬರೆದಿಟ್ಟಿದ್ದಾರೆ ಎನ್ನಲಾದ 11 ಪುಟಗಳ ಮರಣಪತ್ರ ಹಾಗೂ ಸಂಗೀತಾ ನೀಡಿರುವ ದೂರು ಆಧರಿಸಿ ಸಿಐಡಿ ತನಿಖಾಧಿಕಾರಿಯಾಗಿರುವ ಡಿವೈಎಸ್‌ಪಿ ಕನಕಲಕ್ಷ್ಮೀ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಬನಶಂಕರಿ ಠಾಣೆ ಪೊಲೀಸರು, ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
‘ಮರಣಪತ್ರ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದ್ದು, ಜೀವಾ ಅವರ ಕೈ ಬರಹದ ಮಾದರಿ ಸಂಗ್ರಹಿಸಲಾಗಿದೆ. ಮರಣಪತ್ರದ ನೈಜತೆ ತಿಳಿಯುವುದಕ್ಕಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗುವುದು. ಮೃತ ಮಹಿಳೆಯ ಸಂಬಂಧಿಕರ ಹೇಳಿಕೆಗಳನ್ನು ದಾಖಲಿಸಲಾಗುವುದು. ಆ ಬಳಿಕ ಪ್ರಕರಣದಲ್ಲಿ ಆರೋಪಿಯಾಗಿರುವ ಅಧಿಕಾರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗುವುದು’ ಎಂದು ಪೊಲೀಸರು ಹೇಳಿದ್ದಾರೆ.
ಭೋವಿ ಅಭಿವೃದ್ಧಿ ನಿಗಮದಲ್ಲಿ ಸಾಲ ಕೊಡಿಸುವುದಾಗಿ ಮಹಿಳೆಯರು ಸೇರಿದಂತೆ ಹಲವರಿಂದ ಹಣ ಪಡೆದು ವಂಚಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಠಾಣೆಯಲ್ಲಿ 2023ರಲ್ಲಿ ದಾಖಲಾಗಿದ್ದ ಪ್ರಕರಣವನ್ನು ಸಿಐಡಿ ತನಿಖೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಸರಸ್ವತಿ, ಲಕ್ಷ್ಮೀ ಹಾಗೂ ಎರಡು ಕಂಪನಿಗಳು ಸೇರಿ 9 ಆರೋಪಿಗಳನ್ನು ಹೆಸರಿಸಲಾಗಿತ್ತು.
ಈ ವಂಚನೆ ಪ್ರಕರಣದಲ್ಲಿ ಜೀವಾ ಕೂಡ ಭಾಗಿಯಾಗಿದ್ದ ಆರೋಪವಿದ್ದ ಕಾರಣ ಸಿಐಡಿ ವಿಚಾರಣೆಗೆ ಕರೆದಿತ್ತು. ಸಿಐಡಿ ವಿಚಾರಣೆಯಿಂದ ರಕ್ಷಣೆ ಕೋರಿ ಜೀವಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಾಲಯವು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.