ADVERTISEMENT

ಅಸ್ಪೃಶ್ಯತೆ ಹೆಚ್ಚಳ: ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2023, 14:37 IST
Last Updated 21 ಡಿಸೆಂಬರ್ 2023, 14:37 IST
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮ ವಾದ) ಪದಾಧಿಕಾರಿಗಳು ಬೇಡಿಕೆ ಈಡೇರಿಕೆಗಾಗಿ ಘೋಷಣೆ ಕೂಗಿದರು – ಪ್ರಜಾವಾಣಿ ಚಿತ್ರ
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮ ವಾದ) ಪದಾಧಿಕಾರಿಗಳು ಬೇಡಿಕೆ ಈಡೇರಿಕೆಗಾಗಿ ಘೋಷಣೆ ಕೂಗಿದರು – ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ರಾಜ್ಯದಲ್ಲಿ ಅಸ್ಪೃಶ್ಯತೆ ಹೆಚ್ಚಾಗುತ್ತಿದ್ದು, ಅದರ ತಡೆಗೆ ಕಠಿಣ ಕ್ರಮ ಕೈಗೊಳ್ಳಬೇಕು. ಸುಳ್ಳು ಜಾತಿ ಪ್ರಮಾಣ ಪತ್ರಗಳು ವಿತರಣೆಯಾದರೆ, ಆಯಾ ಜಿಲ್ಲಾಧಿಕಾರಿ ಮತ್ತು ಪೊಲೀಸ್‌ ವರಿಷ್ಠಾಧಿಕಾರಿಯನ್ನೇ ಹೊಣೆಗಾರರನ್ನಾಗಿ ಮಾಡಬೇಕು’ ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮ ವಾದ) ಪದಾಧಿಕಾರಿಗಳು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿದ್ದ ಪ್ರತಿಭಟನಕಾರರು, ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಘೋಷಣೆಗಳನ್ನು ಕೂಗಿ,  ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.

‘ಎಸ್.ಸಿ, ಎಸ್‌.ಟಿ ಸಮುದಾಯದವರ ಅಭಿವೃದ್ಧಿಗೆ ಸ್ಥಾಪಿಸಿರುವ ಎಲ್ಲ ನಿಗಮ ಮಂಡಳಿಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು. ರಾಜ್ಯದಲ್ಲಿ ಎಸ್‌.ಸಿ, ಎಸ್‌.ಟಿ ಸಮುದಾಯದವರು ಸ್ಮಶಾನ ಸಮಸ್ಯೆ ಎದುರಿಸುತ್ತಿದ್ದು, ಸ್ಮಶಾನ ನಿರ್ಮಾಣಕ್ಕೆ ಸೂಕ್ತ ಭೂಮಿ ಮಂಜೂರು ಮಾಡಬೇಕು. ಎಚ್‌.ಕಾಂತರಾಜ ಆಯೋಗದ ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷಾ ವರದಿಯನ್ನು ಬಿಡುಗಡೆಗೊಳಿಸಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ADVERTISEMENT

‘ಎಸ್‌.ಸಿ, ಎಸ್‌.ಟಿ ಸಮುದಾಯದವರಿಗೆ ಖಾಸಗಿ ಕ್ಷೇತ್ರದ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು. ಈ ಸಮುದಾಯದವರಿಗೆ ಮೀಸಲಿಟ್ಟಿದ್ದ ಅನುದಾನ ದುರ್ಬಳಕೆ ಆಗಿದ್ದು, ತಪ್ಪಿತಸ್ಥರಿಂದ ಅನುದಾನದ ಹಣವನ್ನು ವಸೂಲಿ ಮಾಡಬೇಕು’ ಎಂದು ಆಗ್ರಹಿಸಿದರು.

‘ನಮ್ಮ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಮುಖ್ಯಮಂತ್ರಿ ಅವರು ಪಾಲ್ಗೊಳ್ಳುವ ಕಾರ್ಯಕ್ರಮಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು’ ಎಂದು ಪ್ರತಿಭಟನಕಾರರು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.