ಬೆಂಗಳೂರು: ರಾಜ್ಯದ ವಿವಿಧೆಡೆ ಭಾನುವಾರದಿಂದ ನಾಲ್ಕು ದಿನಗಳು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗೆ ಭಾನುವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವವಿದೆ. ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಕರಾವಳಿಯಲ್ಲಿ ಪ್ರತಿ ಗಂಟೆಗೆ 35 ಕಿ.ಮೀ.ನಿಂದ 55 ಕಿ.ಮೀ.ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಚಂಡಮಾರುತದ ವಾತಾವರಣ ಇರಲಿದೆ. ಆದ್ದರಿಂದ, ಮೀನುಗಾರರು ಎಚ್ಚರವಹಿಸಬೇಕು ಎಂದು ಇಲಾಖೆ ತಿಳಿಸಿದೆ.
ಇದೇ 23ರವರೆಗೂ ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರಿಯುವ ಬಗ್ಗೆ ಇಲಾಖೆ ಮುನ್ಸೂಚನೆ ನೀಡಿದೆ. 21ರಂದು ಎಂಟು ಜಿಲ್ಲೆಗಳಿಗೆ, 22ರಂದು 12 ಜಿಲ್ಲೆಗಳಿಗೆ ಹಾಗೂ 23ರಂದು ಐದು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.