ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರಿಗೆ ₹31 ಸಾವಿರ ಕೋಟಿ ಮೊತ್ತದ ಬಿಲ್ ಬಾಕಿ ಇದೆ. ಅದರಲ್ಲಿ ಶೇಕಡ 50ರಷ್ಟು ಮೊತ್ತವನ್ನು ತಿಂಗಳೊಳಗೆ ಪಾವತಿಸದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ಆರಂಭಿಸಲಾಗುವುದು ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಹೇಳಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಜಗನ್ನಾಥ್ ಬಿ. ಶೇಗಜಿ, ‘ಬಾಕಿ ಹಣ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಚಿವರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ₹31 ಸಾವಿರ ಕೋಟಿ ಮೊತ್ತವನ್ನು ಒಂದೇ ಬಾರಿಯಲ್ಲದಿದ್ದರೂ ಹಂತ–ಹಂತವಾಗಿ ಬಿಡುಗಡೆ ಮಾಡಬೇಕಿತ್ತು. ಆದರೆ, ಗುತ್ತಿಗೆದಾರರ ಮನವಿಗೆ ಸರ್ಕಾರ ಸ್ಪಂದಿಸಿಲ್ಲ’ ಎಂದು ದೂರಿದರು.
‘ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ದಸರಾ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಗುತ್ತಿಗೆದಾರರಿಗೆ ಬಾಕಿ ಬಿಲ್ ಬಿಡುಗಡೆಗೊಳಿಸಲಾಗುತ್ತಿತ್ತು. ಆದರೆ, ಈಗಿನ ಸರ್ಕಾರ ಇದುವರೆಗೂ ಬಾಕಿ ಬಿಲ್ ಪಾವತಿಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಪತ್ರ ಬರೆಯಲಾಗುವುದು’ ಎಂದರು.
‘ಕೆಲವು ಇಲಾಖೆಗಳಲ್ಲಿ ಶೇಕಡ 7ರಿಂದ 15ರಷ್ಟು ಬಿಲ್ ಮೊತ್ತವನ್ನು ಪಾವತಿ ಮಾಡಲಾಗುತ್ತಿದೆ. ಕೆಲ ಇಲಾಖೆಗಳಲ್ಲಿ ತಮಗೆ ಬೇಕಾದ ಪ್ರಭಾವಿ ಗುತ್ತಿಗೆದಾರರಿಗೆ ಮಾತ್ರ ಬಾಕಿ ಮೊತ್ತ ಪಾವತಿಸಲಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರೆ, ಇಲಾಖೆ ಉಸ್ತುವಾರಿ ಹೊಂದಿರುವ ಸಚಿವರೊಂದಿಗೆ ಮಾತನಾಡಿ ಎಂಬ ಹೇಳಿಕೆ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.
‘ಯಾವುದೇ ಇಲಾಖೆಯಲ್ಲಿ ಬಿಲ್ ಪಾವತಿಯಲ್ಲಿ ಜ್ಯೇಷ್ಠತೆಯನ್ನು ಪಾಲಿಸುತ್ತಿಲ್ಲ. ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಜತೆ ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಜಲ ಸಂಪನ್ಮೂಲ, ಸಣ್ಣ ನೀರಾವರಿ, ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಬಿಬಿಎಂಪಿಯ ಉಸ್ತುವಾರಿ ವಹಿಸಿಕೊಂಡಿರುವ ಸಚಿವರು ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಆದರೂ ಸಭೆ ನಡೆಸಲು ಸರ್ಕಾರ ಹಿಂದೇಟು ಹಾಕುತ್ತಿದೆ’ ಎಂದರು.
‘ಮೂರು ಮತ್ತು ನಾಲ್ಕನೇ ದರ್ಜೆಯ ಗುತ್ತಿಗೆದಾರರು ಹಣವನ್ನು ಬ್ಯಾಂಕ್, ಖಾಸಗಿ ಲೇವಾದೇವಿಗಾರರ ಬಳಿ ಸಾಲ ಪಡೆದು ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದಾರೆ. ಹಲವರು ಆಸ್ತಿಗಳನ್ನು ಅಡಮಾನ ಇರಿಸಿದ್ದಾರೆ. ಬಿಲ್ ಮೊತ್ತ ಪಾವತಿಯಾಗದ ಕಾರಣ ಗುತ್ತಿಗೆದಾರರು ಊರು ಬಿಟ್ಟು ಹೋಗಿದ್ದಾರೆ. ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಓಡಾಡುತ್ತಿದ್ದಾರೆ’ ಎಂದು ಹೇಳಿದರು.
ಸಂಘದ ಕಾರ್ಯಾಧ್ಯಕ್ಷರಾದ ಎಂ.ಎಸ್. ಸಂಕಾಗೌಡಶಾನಿ, ಆರ್. ಮಂಜುನಾಥ್, ಕೆ. ರಾಧಾಕೃಷ್ಣ ನಾಯಕ್, ಪ್ರಧಾನ ಕಾರ್ಯದರ್ಶಿ ಜಿ.ಎಂ. ರವೀಂದ್ರ, ಉಪಾಧ್ಯಕ್ಷರಾದ ಬಿ.ಸಿ. ದಿನೇಶ್ ಮತ್ತು ಬಿ.ಎನ್. ಕೃಷ್ಣೇಗೌಡ ಪತ್ರಿಕಾಗೋಷ್ಠಿಯಲ್ಲಿದ್ದರು.
‘ಕೆಆರ್‌ಐಡಿಎಲ್‌ಗೆ ಹೆಚ್ಚಿನ ಕಾಮಗಾರಿ’
‘ಕಲ್ಯಾಣ ಕರ್ನಾಟಕ ಭಾಗದ ಶಾಸಕರು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಆರ್‌ಐಡಿಎಲ್) ಹೆಚ್ಚಿನ ಕಾಮಗಾರಿಗಳನ್ನು ನೀಡುತ್ತಿದ್ದಾರೆ. ಇದರಿಂದ ಆ ಭಾಗದ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರಿಗೆ ಅನ್ಯಾಯ ಮಾಡುತ್ತಿದ್ದಾರೆ’ ಎಂದು ಜಗನ್ನಾಥ್ ಶೇಗಜಿ ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.