ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಬಹು ನಿರೀಕ್ಷಿತ ಕಾವೇರಿ 5ನೇ ಹಂತದ ಯೋಜನೆಯನ್ನು ಇದೇ 16ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಲೋಕಾರ್ಪಣೆ ಮಾಡಲಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯ(ಟಿ.ಕೆ.ಹಳ್ಳಿ) ಬೆಂಗಳೂರು ಜಲಮಂಡಳಿ ಕಚೇರಿ ಆವರಣದಲ್ಲಿ ಅಂದು ಬೆಳಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಯೋಜನೆಯನ್ನು ಲೋಕಾರ್ಪಣೆ ಮಾಡಲಾಗುತ್ತಿದೆ.
ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಚಿವರು, ಸಂಸದರು ಮತ್ತು ಶಾಸಕರು ಸೇರಿದಂತೆ ಎಲ್ಲ ಚುನಾಯಿತ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಜಲಮಂಡಳಿ ಅಧ್ಯಕ್ಷ ವಿ.ರಾಮ್‌ಪ್ರಸಾತ್ ಮನೋಹರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಯೋಜನೆಗೆ ಆರ್ಥಿಕ ಸಹಕಾರ ನೀಡಿರುವ ಜೈಕಾ ಇಂಡಿಯಾ ಕಚೇರಿಯ ಮುಖ್ಯ ಪ್ರತಿನಿಧಿ ಟೇಕುಚಿ ಟಕುರೋ, ಭಾರತದಲ್ಲಿ ಜಪಾನ್‌ನ ಕಾನ್ಸಲ್ ಜನರಲ್ ಟ್ಸುಟೋಮು, ಭಾರತದಲ್ಲಿ ಜಪಾನ್ ರಾಯಭಾರ ಕಚೇರಿಯ ಆರ್ಥಿಕ ಸಚಿವ(ಆರ್ಥಿಕ ಮತ್ತು ಅಭಿವೃದ್ಧಿ) ಹೊಕುಗೋ ಕ್ಯೋಕು ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಡಿಸಿಎಂ ಸಿಎಂಗೆ ಆಹ್ವಾನ
ಜಲಮಂಡಳಿ ಅಧ್ಯಕ್ಷ ರಾಮ್‌ಪ್ರಸಾತ್ ಮನೋಹರ್ ಅವರು ಮಂಗಳವಾರ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರಿಗೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ನೀಡಿದರು. ಆಹ್ವಾನ ಪತ್ರಿಕೆ ಸ್ವೀಕರಿಸಿ ಮಾತನಾಡಿದ ಶಿವಕುಮಾರ್ ಅವರು ‘ಈ ಯೋಜನೆಯಿಂದ 110 ಹಳ್ಳಿಗಳ ನಿವಾಸಿಗಳಿಗೆ ಹಾಗೂ ನಗರದ ಎಲ್ಲ ನಿವಾಸಿಗಳಿಗೆ ಸಮರ್ಪಕ ನೀರು ಸರಬರಾಜಾಗಲಿದೆ’ ಎಂದು ತಿಳಿಸಿದರು.
110 ನೀರು ಪೂರೈಕೆಯಾಗುವ ಹಳ್ಳಿಗಳು
4 ಲಕ್ಷ ನೀರಿನ ಸಂಪರ್ಕದ ಗುರಿ
₹4336 ಕೋಟಿ ಯೋಜನೆಯ ವೆಚ್ಚ
2014 ಯೋಜನೆಯ ಆರಂಭ
770 ಎಂಎಲ್‌ಡಿ ನೀರು ಪೂರೈಕೆ ಪ್ರಮಾಣ
1450 ಎಂಎಲ್‌ಡಿ ಸದ್ಯ ನಗರಕ್ಕೆ ನೀರು ಪೂರೈಕೆಯಾಗುತ್ತಿರುವ ಪ್ರಮಾಣ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.