ADVERTISEMENT

ಕೆಪಿಎಸ್‌ಸಿ ಮರು ಪರೀಕ್ಷೆಗೆ ಕರವೇ ಆಗ್ರಹ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2024, 15:42 IST
Last Updated 30 ಆಗಸ್ಟ್ 2024, 15:42 IST
ಕೆಪಿಎಸ್‌ಸಿ
ಕೆಪಿಎಸ್‌ಸಿ    

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಆ ಪರೀಕ್ಷೆಯನ್ನು ರದ್ದುಪಡಿಸಿ ಹೊಸದಾಗಿ ನಡೆಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘1.36 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅದರಲ್ಲಿ 1 ಲಕ್ಷಕ್ಕಿಂತ ಅಧಿಕ ವಿದ್ಯಾರ್ಥಿಗಳು ಗ್ರಾಮೀಣ ಭಾಗದ ಮತ್ತು ಕನ್ನಡ ಮಾಧ್ಯಮದವರು. ಪ್ರಶ್ನೆ ಪತ್ರಿಕೆ ಅನುವಾದದಲ್ಲಿ ಒಂದೆರಡು ತಪ್ಪಾಗಿದ್ದರೆ ಏನೋ ಲೋಪವಾಗಿದೆ ಎಂದು ತಿಳಿಯಬಹುದಿತ್ತು. ಆದರೆ 120 ಅಂಕಗಳ 60 ಪ್ರಶ್ನೆಗಳು ತಪ್ಪಾಗಿರುವುದರ ಹಿಂದೆ ಹುನ್ನಾರವಿದೆ’ ಎಂದು ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ ನಡೆಯುವ ಯಾವುದೇ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮೊದಲು ಕನ್ನಡದಲ್ಲಿ ತಯಾರಾಗಬೇಕು. ಅದನ್ನು ನಂತರ ಇಂಗ್ಲಿಷಿಗೆ ಭಾಷಾಂತರ ಮಾಡಿಸಬೇಕು. ಇದನ್ನು ಅನುಸರಿಸದೇ ಕೆಪಿಎಸ್‌ಸಿ ದುಂಡಾವರ್ತನೆ ಪ್ರದರ್ಶಿಸಿದೆ. ಕರ್ನಾಟಕದಲ್ಲಿ ಪರೀಕ್ಷೆ ನಡೆಸುವಾಗ ಮೊದಲು ಇಂಗ್ಲಿಷ್ ಭಾಷೆಯಲ್ಲಿ ಪ್ರಶ್ನೆಪತ್ರಿಕೆ ತಯಾರಿಸಿ ಅದನ್ನು ಕನ್ನಡಕ್ಕೆ ಭಾಷಾಂತರ ಮಾಡಿಸುವುದು ಅವೈಜ್ಞಾನಿಕ ಮತ್ತು ಕನ್ನಡ ವಿರೋಧಿ ಧೋರಣೆ ಎಂದು ಹೇಳಿದ್ದಾರೆ.

ADVERTISEMENT

ಆಯೋಗವು ಸಮರ್ಥನೆ ನೀಡುವುದನ್ನು ಬಿಟ್ಟು ತಪ್ಪನ್ನು ಒಪ್ಪಿಕೊಳ್ಳಬೇಕು. ಮರು ಪರೀಕ್ಷೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಕನ್ನಡದಲ್ಲಿಯೇ ಮೊದಲು ಪ್ರಶ್ನೆಪತ್ರಿಕೆ ತಯಾರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.