ಬೆಂಗಳೂರು: ಕೆಪಿಟಿಸಿಎಲ್ ಮತ್ತು ರಾಜ್ಯದ ವಿವಿಧ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ 2,975 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳ ಭರ್ತಿಗೆ ಎಸ್ಸೆಸ್ಸೆಲ್ಸಿ ಅಂಕಗಳು ಮತ್ತು ದೈಹಿಕ ಪರೀಕ್ಷೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ಬದಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಬೇಕು ಎಂದು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಆಗ್ರಹಿಸಿದೆ.
ಈ ಸಂಬಂಧ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಮನವಿ ಸಲ್ಲಿಸಿರುವ ಸಂಘಟನೆ ಅಧ್ಯಕ್ಷ ಆರ್.ಕಾಂತಕುಮಾರ್, ‘ರಾಜ್ಯದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ನ್ಯಾಯ ಸಮ್ಮತವಲ್ಲದ ನೇಮಕಾತಿ ಪ್ರಕ್ರಿಯೆಯು ನಿರುದ್ಯೋಗಿಗಳಲ್ಲಿ ಮತ್ತಷ್ಟು ಆಕ್ರೋಶ ಹೆಚ್ಚಿಸುತ್ತದೆ. ಎಸ್ಸೆಸ್ಸೆಲ್ಸಿ ಅಂಕಗಳ ಆಧಾರದ ಮೇಲಿನ ನೇಮಕಾತಿ ಪ್ರಕ್ರಿಯೆಯಿಂದ ಕೋವಿಡ್ ನಂತರದ ವರ್ಷಗಳಲ್ಲಿನ ಅಭ್ಯರ್ಥಿಗಳಿಗೆ ಹೆಚ್ಚು ಅನುಕೂಲವಾಗುತ್ತದೆ’ ಎಂದು ಹೇಳಿದ್ದಾರೆ.
‘ಕೋವಿಡ್ ನಂತರದ ವರ್ಷಗಳಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಅಭ್ಯರ್ಥಿಗಳೇ ದೊಡ್ಡ ಸಂಖ್ಯೆಯಲ್ಲಿ ಇದ್ದಾರೆ. ಈಗಾಗಲೇ ಇದೇ ಹುದ್ದೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ. ಜೊತೆಗೆ ನೆರೆಹೊರೆ ರಾಜ್ಯಗಳಲ್ಲಿಯೂ ಇದೇ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮುಖಾಂತರ ನೇಮಕಾತಿ ಮಾಡಲಾಗುತ್ತಿದೆ. ಆದ್ದರಿಂದ ರಾಜ್ಯದಲ್ಲಿಯೂ ಇದೇ ನಿಯಮ ಅಳವಡಿಸಿಕೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.