ಬೆಂಗಳೂರು: ‘ರಾಜ್ಯದ ಆರ್ಥಿಕ ಸ್ಥಿತಿ ಬಗ್ಗೆ ಯಾರೂ ತಪ್ಪು ಮಾಹಿತಿ ನೀಡದಂತೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ತಕ್ಷಣ ಕಡಿವಾಣ ಹಾಕಬೇಕು’ ಎಂದು ವಿಧಾನ ಪರಿಷತ್‌ನ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಆಗ್ರಹಿಸಿದ್ದಾರೆ.
‘ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ’ ಎಂದು ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿರುವುದು ಆಕ್ಷೇಪಾರ್ಹ’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ದಿನೇಶ್ ಗೂಳಿಗೌಡ ಹೇಳಿದ್ದಾರೆ.
‘ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿ ₹ 58 ಸಾವಿರ ಕೋಟಿ ಮೀಸಲಿಟ್ಟಿದೆ. ಸಾಮಾಜಿಕ ಪಿಂಚಣಿ, ಸರ್ಕಾರಿ ನೌಕರರ ವೇತನ, ವಿವಿಧ ಇಲಾಖೆಗಳಿಗೆ ಅನುದಾನ ಹಂಚಿಕೆಯೂ ಸಮರ್ಪಕವಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಮೀಸಲಿಟ್ಟೇ ಎಲ್ಲ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ’ ಎಂದಿದ್ದಾರೆ.
‘ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಜಾರಿಗೊಳಿಸಿದ್ದಾರೆ. ಅಭಿವೃದ್ಧಿ ಕಾರ್ಯಗಳ ಸಹಿತ ಗ್ಯಾರಂಟಿ ಯೋಜನೆಗಳನ್ನೂ ಅನುಷ್ಠಾನ ಮಾಡಿಕೊಂಡು ಬರಲಾಗುತ್ತಿದೆ. ಹೀಗಿರುವಾಗ ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರರು ಸರಿಯಾದ ಮಾಹಿತಿ ಪಡೆದು ಮಾತನಾಡಬೇಕು’ ಎಂದು ಸಲಹೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.