ಬೆಂಗಳೂರು: ಶೀಘ್ರವೇ ಕಾನೂನು ತಜ್ಞರ ಸಭೆ ಕರೆದು, ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹಾಗೂ ಎಲ್ಲ ಲಿಂಗಾಯತ ಒಳ ಪಂಗಡಗಳಿಗೆ ಒಬಿಸಿ ಮೀಸಲಾತಿ ನೀಡುವಂತೆ ಶಿಫಾರಸು ಮಾಡಬೇಕು ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರವನ್ನು ಆಗ್ರಹಿಸಿದರು.
ಶಾಸಕರ ಭವನದಲ್ಲಿ ಮಂಗಳವಾರ ನಡೆದ ಲಿಂಗಾಯತ ಪಂಚಮಸಾಲಿ ವಕೀಲರ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಎರಡು ವರ್ಷಗಳಿಂದ ಹೋರಾಟ ಮಾಡಿದರೂ ಸರ್ಕಾರದಿಂದ ನ್ಯಾಯ ಸಿಕ್ಕಿಲ್ಲ. ಹಲವರು ಸಲಹೆ ನೀಡಿದ್ದಾರೆ. ಸಮುದಾಯದ ಶಾಸಕರು ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿಲ್ಲ. ಹಾಗಾಗಿ ಕಾನೂನಾತ್ಮಕವಾಗಿ ವಕೀಲರ ಮೂಲಕ ಹೋರಾಟ ರೂಪಿಸಲು ಸಭೆ ನಡೆಸಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಐದು ನಿರ್ಣಯ ಕೈಗೊಳ್ಳಲಾಗಿದೆ. ಕಾನೂನು ಅಡೆತಡೆಗಳನ್ನು ನಿವಾರಣೆ ಮಾಡಿಕೊಂಡು ಮೀಸಲಾತಿ ಬಗ್ಗೆ ಸರ್ಕಾರದ ನಿಲುವು ಸ್ಪಷ್ಟಪಡಿಸಬೇಕು. ನಿರ್ಲಕ್ಷ್ಯ ಮಾಡಿದಲ್ಲಿ ಬೆಳಗಾವಿ ಸುವರ್ಣಸೌಧದ ಅಧಿವೇಶನದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಲಿಂಗಾಯತ ಪಂಚಮಸಾಲಿ ವಕೀಲರ ಪರಿಷತ್ ಎಂಬ ಸಂಘಟನೆ ರಚಿಸಲು ನಿರ್ಧರಿಸಲಾಗಿದೆ ಹಾಗೂ ಕಾನೂನು ತಜ್ಞ ಸದಸ್ಯರ ಸಮಿತಿಯನ್ನು ರಚನೆ ಮಾಡಿ ಅವರ ಮಾರ್ಗದರ್ಶನ ಪಡೆಯಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ವಕೀಲರಾದ ವೈ.ಬಿ.ಮುದಿಗೌಡ, ಸಿ.ವಿ.ಹೊಂಬಾಳ್, ಪ್ರಕಾಶ ಭಾವಿಕಟ್ಟಿ, ಲಿಂಗಾಯತ ಪಂಚಮಸಾಲಿ ಮಹಾಸಭಾದ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಆನಂದ ಬಿರಾದಾರ, ಪ್ರಧಾನ ಕಾರ್ಯದರ್ಶಿ ಪುಟ್ಟರಾಜು, ಐಟಿಬಿಟಿ ವಿಭಾಗದ ಕಾಂತೇಶ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.