ಬೆಂಗಳೂರು: ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಹುಸೈನ್‌ಪುರ ಗ್ರಾಮದಲ್ಲಿ ದರ್ಗಾದಿಂದ 100 ಮೀಟರ್ ದೂರದಲ್ಲಿ ಮದ್ಯದಂಗಡಿಗೆ ನೀಡಿರುವ ಪರವಾನಗಿ ರದ್ದುಗೊಳಿಸಲು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಹುಸೈನ್‌ಪುರ ಗ್ರಾಮದ ಬಾಲಾಜಿ ಸೇರಿದಂತೆ ಮೂವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಹುಸೈನ್‌ಪುರ ಗ್ರಾಮದ ದರ್ಗಾದಿಂದ ಕೇವಲ 100 ಮೀಟರ್ ಅಂತರದಲ್ಲಿ ಅನ್ನಪೂರ್ಣ ಬಾರ್ ಮತ್ತು ರೆಸ್ಟೋರೆಂಟ್ ನಡೆಸಲಾಗುತ್ತಿದೆ. ನಿಯಮಗಳನ್ನು ಉಲ್ಲಂಘಿಸಿ ಮದ್ಯದಂಗಡಿ ನಡೆಸಲಾಗುತ್ತಿದೆ. ಸ್ಥಳೀಯ ಮನವಿಪತ್ರ ಪರಿಗಣಿಸಿ ಬಾರ್ ಅನ್ನು ಬೇರೊಂದು ಸ್ಥಳಕ್ಕೆ ಸ್ಥಳಾಂತರಿಸಲು ಸರ್ಕಾರಿ ಪ್ರಾಧಿಕಾರಗಳು ಬಯಸಿವೆ ಎಂಬುದಾಗಿ ಅರ್ಜಿದಾರರು ತಿಳಿಸಿದ್ದಾರೆ. ಆದರೆ, ಸರ್ಕಾರದ ಸಂಬಂಧಪಟ್ಟ ಇಲಾಖೆ ಅಥವಾ ಸಂಸ್ಥೆ ವಿವಾದಿತ ಸ್ಥಳದ ಸರ್ವೇ ನಡೆಸಿರುವ ಬಗ್ಗೆ ಹಾಗೂ ಸ್ಥಳೀಯರ ಮನವಿಯನ್ನು ಸಂಬಂಧಪಟ್ಟ ಇಲಾಖೆ ಪರಿಗಣಿಸಿರುವ ಬಗ್ಗೆ ಯಾವುದೇ ದಾಖಲೆಯನ್ನು ಸಲ್ಲಿಸಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಅಲ್ಲದೆ, ಅರ್ಜಿದಾರರ ಪೈಕಿ ಮುಸ್ಲಿಂ ಸಮುದಾಯದವರು ಯಾರೂ ಇಲ್ಲ. ಅರ್ಜಿದಾರರು ಕಲ್ಪನೆಗಳ ಆಧಾರದ ವಾದ ಮಂಡಿಸುತ್ತಿದ್ದಾರೆ. ಸಮಗ್ರವಾದ ಮಾಹಿತಿ ಒದಗಿಸದೆ ಅವ್ಯವಸ್ಥಿತವಾಗಿ ಅರ್ಜಿ ಸಲ್ಲಿಸಲಾಗಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೆಸರಿನಲ್ಲಿ ಇಂತಹ ಅರೆಬೆಂದ ಅರ್ಜಿಗಳನ್ನು ಪುರಸ್ಕರಿಸಲಾಗದು ಎಂದು ಅಭಿಪ್ರಾಯಪಟ್ಟು ನ್ಯಾಯಪೀಠ ಅರ್ಜಿ ವಜಾಗೊಳಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.