ಬೆಂಗಳೂರು: ‘ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮೂರು ವರ್ಷಗಳ ಕಾನೂನು ಪದವಿ (ಎಲ್‌ಎಲ್‌ಬಿ) ಪ್ರವೇಶಾತಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಮೀಸಲು ನೀಡದಿರಲು ನಿರ್ಧರಿಸಲಾಗಿದೆ‘ ಎಂದು ರಾಷ್ಟ್ರೀಯ ಕಾನೂನು ಶಾಲೆ ವಿಶ್ವವಿದ್ಯಾಲಯ (ಎನ್‌ಎಲ್‌ಎಸ್‌ಯು) ಹೈಕೋರ್ಟ್‌ಗೆ ತಿಳಿಸಿದೆ.
ತಮಗೆ ಕಾನೂನು ಪದವಿ ಪ್ರವೇಶ ನಿರಾಕರಿಸಿರುವ ಎನ್‌ಎಲ್‌ಎಸ್‌ಯು ಕ್ರಮವನ್ನು ಪ್ರಶ್ನಿಸಿ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿ ಮುಗಿಲ್ ಅನ್ಬು ವಸಂತ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ ಎನ್‌ಎಲ್‌ಎಸ್‌ಯು; ತನ್ನ ಕಾರ್ಯಕಾರಿ ಮಂಡಳಿಯ ನಿರ್ಧಾರವನ್ನು ನ್ಯಾಯಪೀಠಕ್ಕೆ ತಿಳಿಸಿತು.
‘ಮೀಸಲಾತಿಯನ್ನು ಸೂಚಿಸುವುದು ಮತ್ತು ಅನುಷ್ಠಾನಗೊಳಿಸುವುದು ವಿಶ್ವವಿದ್ಯಾಲಯದ ಪರಾಮಾಧಿಕಾರ ಎಂಬುದನ್ನು ಕರ್ನಾಟಕ ಹೈಕೋರ್ಟ್ ಪ್ರಕರಣವೊಂದರಲ್ಲಿ ಆದೇಶಿಸಿದೆ. ವಿಶ್ವವಿದ್ಯಾಲಯ ಅರ್ಜಿದಾರರ ಯಾವುದೇ ಹಕ್ಕನ್ನು ಉಲ್ಲಂಘಿಸಿಲ್ಲ ಅಥವಾ ಅವರ ವಿಚಾರದಲ್ಲಿ ತಾರತಮ್ಯ ನೀತಿ ಅನುಸರಿಸಿಲ್ಲ. ಮೇಲಾಗಿ ಎನ್‌ಎಲ್‌ಎಸ್‌ಟಿ-ಎಲ್‌ಎಲ್‌ಬಿ 2023ರ ಮಾರ್ಗಸೂಚಿಯಲ್ಲಿ ಕಾನೂನು ಪದವಿ ಪ್ರವೇಶಾತಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಮೀಸಲು ಒದಗಿಸುವ ಬಾಧ್ಯತೆ ಹೊಂದಿಲ್ಲ‘ ಎಂದು ಸ್ಪಷ್ಟಪಡಿಸಿತು.
ಆಕ್ಷೇಪಣೆಯನ್ನು ದಾಖಲಿಸಿಕೊಂಡ ನ್ಯಾಯಪೀಠ ಈ ಕುರಿತಂತೆ ಉತ್ತರಿಸಲು ರಾಜ್ಯ ಸರ್ಕಾರಕ್ಕೆ ಒಂದು ವಾರ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.