ಬೆಂಗಳೂರು: ರಾಜ್ಯದ 105ಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಈ ಕುರಿತಂತೆ ಸಲ್ಲಿಸಲಾಗಿರುವ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಮತ್ತು ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಪ್ರತಿವಾದಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರ ಮನವಿಯ ಮೇರೆಗೆ ವಿಚಾರಣೆಯನ್ನು ಫೆಬ್ರುವರಿ 4ಕ್ಕೆ ಮುಂದೂಡಿದೆ.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಜಯಕುಮಾರ್ ಎಸ್. ಪಾಟೀಲ, ‘ಸೆ.3ರಂದು ಮೀಸಲು ನಿಗದಿ ಮಾಡಿ ಹೊರಡಿಸಿದ್ದ ಪಟ್ಟಿಯಲ್ಲಿ ರೊಟೇಷನ್ ಪಾಲಿಸಿಲ್ಲ. ಹಾಗಾಗಿ ಬಹುತೇಕ ಕಡೆ ಮೀಸಲು ಪುನರಾವರ್ತನೆ ಆಗಿದೆ. ಆದ್ದರಿಂದ ವೇಳಾಪಟ್ಟಿ ಪ್ರಕಟಿಸದಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿದರು.
‘ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ 2018ರ ಸೆಪ್ಟೆಂಬರ್ 3ರಂದು ಹೊರಡಿಸಿದ ಅಧಿಸೂಚನೆ ವಿಚಾರದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ’ ಎಂಬ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಿ ರಾಯಚೂರು ಜಿಲ್ಲೆಯ ಸಿಂಧನೂರಿನ ಆಲಂ ಪಾಷಾ, ಗುರಮಠಕಲ್‌ನ ಪವಿತ್ರಮ್ಮ, ಕೊಪ್ಪಳದ ಅಜ್ಮದ್ ಪಟೇಲ್ ಈ ಮೇಲ್ಮನವಿ ಸಲ್ಲಿಸಿದ್ದಾರೆ.
ಮತ್ತೊಂದು ಪ್ರಕರಣ: ‘ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದಾದ್ಯಂತ 13 ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲು ಮರು ನಿಗದಿ ಪಟ್ಟಿ ನೀಡುವಂತೆ ನಿರ್ದೇಶನ ನೀಡಬೇಕು’ ಎಂದು ಕೋರಿ ಸಲ್ಲಿಸಿರುವ ಮತ್ತೊಂದು ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದೆ.
ರಾಜ್ಯ ಚುನಾವಣಾ ಆಯೋಗವು ಸಲ್ಲಿಸಿರುವ ಈ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಆಯೋಗದ ಪರ ವಾದ ಮಂಡಿಸಿದ ಹಿರಿಯ ವಕೀಲ, ಕೆ.ಎನ್.ಫಣೀಂದ್ರ, ‘ಅವಧಿ ಪೂರ್ಣಗೊಳ್ಳಲಿರುವ ರಾಜ್ಯದ 101 ನಗರ ಸ್ಥಳೀಯ ಸಂಸ್ಥೆಗಳ ಪೈಕಿ 13 ರ ಮೀಸಲು ನಿಗದಿ ಅಧಿಸೂಚನೆ ರದ್ದುಪಡಿಸಿ ಜನವರಿ 14ರಂದು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಆದೇಶಿಸಿತ್ತು. ಆ 13 ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮೀಸಲನ್ನು ಜ.28ರೊಳಗೆ ಆಯೋಗಕ್ಕೆ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಆದರೆ ಅದನ್ನು ಪಾಲಿಸಿಲ್ಲ’ ಎಂದು ಆಕ್ಷೇಪಿಸಿದರು.
‘ಮಾಗಡಿ ಮತ್ತು ಕನಕಪುರ ಪುರಸಭೆಗಳ ಮೀಸಲು ಅಧಿಸೂಚನೆ ನಿರ್ಧಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ’ ಎಂದು ಏಕಸದಸ್ಯ ನ್ಯಾಯಪೀಠ ಹೇಳಿತ್ತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.