ಬೆಂಗಳೂರು: ‘ಮೂರು ವರ್ಷಗಳಲ್ಲಿ ₹7,300 ಕೋಟಿ ಖರ್ಚು ಮಾಡಿದ್ದರೂ, ಬಿಬಿಎಂಪಿ ವ್ಯಾಪ್ತಿಯಲ್ಲಿ ಪರಿಪೂರ್ಣವಾಗಿ ಗುಂಡಿಗಳನ್ನು ಮುಚ್ಚುವ ಕೆಲಸವಾಗಿಲ್ಲ’ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆರೋಪಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಸ್ತೆ ಗುಂಡಿಗಳನ್ನು ಮುಚ್ಚುವ ಹೆಸರಲ್ಲಿ ಹಣ ಲೂಟಿ ಮಾಡಲಾಗಿದೆ. ಬೆಂಗಳೂರಿನ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ರಸ್ತೆ ಗುಂಡಿಗಳು ಇರುವ ಕಡೆ ಆಮ್ ಆದ್ಮಿ ಪಕ್ಷದಿಂದ ಜನಾಂದೋಲನ ನಡೆಸಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.
‘ನ್ಯಾಯಾಲಯ ಸೂಚಿಸಿದರೂ ಸರ್ಕಾರ ಬಿಬಿಎಂಪಿಗೆ ಚುನಾವಣೆ ನಡೆಸಲು ಆಸಕ್ತಿ ತೋರುತ್ತಿಲ್ಲ. ಪಾಲಿಕೆಗೆ ಚುನಾಯಿತ ಸದಸ್ಯರು ಇಲ್ಲದೆ ಜನರ ಸಮಸ್ಯೆ ಕೇಳುವವರೇ ಇಲ್ಲದಂತಾಗಿದೆ. ಶಾಸಕರೇ ಬಿಬಿಎಂಪಿ ಚುನಾವಣೆ ನಡೆಸಲು ಅಡ್ಡಿಯಾಗಿದ್ದಾರೆ. ಸರ್ಕಾರ ತಕ್ಷಣ ಬಿಬಿಎಂಪಿ ಚುನಾವಣೆ ನಡೆಸಲು ಕ್ರಮ ತೆಗೆದುಕೊಳ್ಳಬೇಕು’ ಎಂದು ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ನಗರ ಘಟಕದ ಉಪಾಧ್ಯಕ್ಷ ಅಶೋಕ್ ಮೃತ್ಯುಂಜಯ, ಯುವ ಘಟಕದ ಅಧ್ಯಕ್ಷ ಉಮೇಶ್ ಪಿಳ್ಳೆಗೌಡ ಹಾಗೂ ಆಟೊ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.