ADVERTISEMENT

ಮಹದೇವಪುರ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿ.ಎಂ ಚಾಲನೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2022, 21:24 IST
Last Updated 24 ಫೆಬ್ರುವರಿ 2022, 21:24 IST
ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಾಸಕ ಅರವಿಂದ ಲಿಂಬಾವಳಿ ಚಾಲನೆ ನೀಡಿದರು. ಸಚಿವ ಡಾ.ಸುಧಾಕರ್, ಸಂಸದ ಪಿ.ಸಿ.ಮೋಹನ್, ವಿಧಾನ ಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ ಇದ್ದರು.
ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಾಸಕ ಅರವಿಂದ ಲಿಂಬಾವಳಿ ಚಾಲನೆ ನೀಡಿದರು. ಸಚಿವ ಡಾ.ಸುಧಾಕರ್, ಸಂಸದ ಪಿ.ಸಿ.ಮೋಹನ್, ವಿಧಾನ ಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ ಇದ್ದರು.   

ಕೆ.ಆರ್.ಪುರ: ‘ಬೆಂಗಳೂರು ನಗರವನ್ನು ಮಾದರಿಯಾಗಿ ಅಭಿವೃದ್ಧಿ ಮಾಡಲಾಗುತ್ತದೆ. ನವ ಬೆಂಗಳೂರಿನಿಂದ ನವ ಕರ್ನಾಟಕ, ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ ಆಗಲಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಹದೇವಪುರ ಕ್ಷೇತ್ರ ವ್ಯಾಪ್ತಿಯಲ್ಲಿನ 250 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಹಾಗೂ ಕೆಆರ್‌ಡಿಸಿಎಲ್ ವತಿಯಿಂದ ಮೇಲು ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ, 150 ಅಡಿಗಳ ಸಿ.ಡಿ.ಪಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ, ಠಾಣೆಯ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ಸೇರಿದಂತೆ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು.

‘ನಗರಕ್ಕೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದಾಗಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಂಡಿದ್ದೇವೆ. ನಮ್ಮ ಸರ್ಕಾರ ವಿಶೇಷ ಕಾಳಜಿಯನ್ನು ಹೊಂದಿದ್ದು, ಬೆಳೆಯುತ್ತಿರುವ ನಗರೀಕರಣಕ್ಕೆ ತಕ್ಕ ಹಾಗೆ ಸೌಕರ್ಯಗಳನ್ನು ಒದಗಿಸುವ ಮೂಲಕ ನಗರವನ್ನು ಮಾದರಿಯಾಗಿ ಮಾಡಲಾಗುತ್ತದೆ’ ಎಂದು ಹೇಳಿದರು.

ADVERTISEMENT

ಕ್ಷೇತ್ರದಲ್ಲಿ ಕಾವೇರಿ ನೀರು ಪೂರೈಕೆ, ಒಳಚರಂಡಿ, 110 ಹಳ್ಳಿಗಳ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳು ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮಹದೇವಪುರ ಹೆಚ್ಚು ಅಭಿವೃದ್ಧಿ ಹೊಂದುವ ಕ್ಷೇತ್ರವಾಗಲಿದೆ’r ಎಂದರು.

‘ಮಹದೇವಪುರ ಭಾಗಕ್ಕೆ ಈ ಸಲ ಅತ್ಯಧಿಕ ಅನುದಾನ ನೀಡಿದ್ದೇನೆ. ನಗರದ ರಾಜಕಾಲುವೆಗಳ ಅಭಿವೃದ್ಧಿಗೆ ₹1,500 ಕೋಟಿ ನೀಡಲಾಗುತ್ತದೆ’ ಎಂದೂ ಅವರು ಹೇಳಿದರು.

ಐಟಿ ಕೇಂದ್ರ ಮಹದೇವಪುರ, ಬೆಂಗಳೂರಿನ ಬೆಳವಣಿಗೆ ದೃಷ್ಟಿಯಿಂದ ಈ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿ ಮಾಡಬೇಕಿದೆ. ನಿಗದಿತ ಸಮಯದಲ್ಲಿ ಕೆಲಸ ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬೆಂಗಳೂರಿನ ಮೆಟ್ರೋ ವಿಸ್ತರಣೆ ಮಾಡಲಾಗುತ್ತದೆ ಎಂದರು.

ಶಾಸಕ ಅರವಿಂದ ಲಿಂಬಾವಳಿ ಮಾತನಾಡಿ, ‘ಇಡೀ ಬೆಂಗಳೂರಿನಲ್ಲಿ ಹೆಚ್ಚು ತೆರಿಗೆ ನೀಡುವ ಕ್ಷೇತ್ರ ಮಹದೇವಪುರ. ಪ್ರಪಂಚದ ಎಲ್ಲ ಭಾಗದ ಜನ ಇಲ್ಲಿ ವಾಸವಾಗಿ ಹೊಸ ಸಂಸ್ಕೃತಿ ಆಚರಣೆ ಮಾಡುತ್ತಿರುವುದರಿಂದ ಹೊಸ ಬೆಂಗಳೂರು ಎಂಬ ಹೆಸರಿಡಬೇಕು’ ಎಂದು ಮನವಿ ಮಾಡಿದರು.

ಬೆಂಗಳೂರು ಪೂರ್ವ ಭಾಗದಲ್ಲಿ ಸರ್ಕಾರಿ ಆಸ್ಪತ್ರೆ ಕೊರತೆ ಇತ್ತು. ಬಡವರೇಡಡ ಹೆಚ್ಚಾಗಿರುವ ಈ ಭಾಗದಲ್ಲಿನ ಜನ ವಿಕ್ಟೋರಿಯಾ, ಕೆ.ಸಿ.ಜನರಲ್ ಸೇರಿದಂತೆ ದೊಡ್ಡ ಆಸ್ಪತ್ರೆಗೆ ಹೋಗಬೇಕಿತ್ತು. ಇದೀಗ ಕ್ಷೇತ್ರದ ಮುನ್ನೇಕೊಳಾಲದಲ್ಲಿ ಆರು ಎಕರೆ ಜಾಗವನ್ನು ಗುರುತಿಸಿ ಆಸ್ಪತ್ರೆಗೆ ಭೂಮಿ ಪೂಜೆ ನೆರವೇರಿಸಲಾಗಿದೆ’ ಎಂದರು.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಂಸದ ಪಿ.ಸಿ.ಮೋಹನ್, ವಿಧಾನಪರಿಷತ್ ಸದಸ್ಯರಾದ ರಮೇಶ್, ಗೋಪಿನಾಥ್‌ರೆಡ್ಡಿ, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವಗುಪ್ತ, ಜಿಲ್ಲಾಧಿಕಾರಿ ಜೆ. ಮಂಜುನಾಥ್, ಬಿಬಿಎಂಪಿಯ ವಿಶೇಷ ಆಯುಕ್ತ ಡಾ.ಕೆ.ವಿ.ತ್ರಿಲೋಕಚಂದ್ರ, ಬಿಜೆಪಿಯ ಕ್ಷೇತ್ರ ಘಟಕದ ಅಧ್ಯಕ್ಷ ಮನೋಹರ್‌ರೆಡ್ಡಿ ಮತ್ತಿತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.