ಬೆಂಗಳೂರು: ‘ನಮ್ಮ ಮೆಟ್ರೊ’ ಹೊಸಹಳ್ಳಿ ನಿಲ್ದಾಣದಲ್ಲಿ ಸೋಮವಾರ ರಾತ್ರಿ ಯುವಕನೊಬ್ಬ ರೈಲಿನಡಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಬಿಎಂಆರ್‌ಸಿಎಲ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಜೀವಾಪಾಯದಿಂದ ಪಾರಾಗಿದ್ದಾನೆ.
ಸೋಮವಾರ ರಾತ್ರಿ 8.56ಕ್ಕೆ ರೈಲು ಬರುವುದನ್ನು ಕಂಡು ಹಾರಿದ್ದ. ರೈಲಿನ ಕೋಚ್‌ಗೆ ತಾಗಿ ಪಕ್ಕಕ್ಕೆ ಬಿದ್ದಿದ್ದು, ಬಿಎಂಆರ್‌ಸಿಎಲ್ ಸಿಬ್ಬಂದಿ ಕೂಡಲೇ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು. ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ವಿದ್ಯುತ್ ಸರಬರಾಜು ಕಡಿತಗೊಳಿಸಲಾಯಿತು. ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ಮೆಟ್ರೊ ನಿಲ್ದಾಣದಿಂದ ಮೈಸೂರು ರಸ್ತೆವರೆಗೆ ಮೆಟ್ರೊ ಸಂಚಾರ ತಾತ್ಕಾಲಿಕವಾಗಿ ಇಲ್ಲದಂತಾಯಿತು. ರಾತ್ರಿ 9.30ರಿಂದ ರೈಲು ಸಂಚಾರ ಆರಂಭಗೊಂಡಿತು ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಮೆಟ್ರೊ ರೈಲುಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು.
ಈ ವರ್ಷ ಮೆಟ್ರೊ ಹಳಿಗೆ ಹಾರಿದ ನಾಲ್ಕನೇ ಘಟನೆ ಇದಾಗಿದೆ. ಮಾರ್ಚ್‌ನಲ್ಲಿ ಅತ್ತಿಗುಪ್ಪೆ ಮೆಟ್ರೊ ನಿಲ್ದಾಣದಲ್ಲಿ ಯುವಕನೊಬ್ಬ ಹಾರಿ ಜೀವ ಕಳೆದುಕೊಂಡಿದ್ದ. ಜನವರಿಯಲ್ಲಿ ಜಾಲಹಳ್ಳಿಯಲ್ಲಿ ಕೇರಳದ ಯುವಕ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ. ಇಂದಿರಾನಗರ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಕೆಳಗೆ ಬಿದ್ದ ಮೊಬೈಲ್ ಎತ್ತಿಕೊಳ್ಳಲು ಹಾರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.