ADVERTISEMENT

ಸಾಮಾಜಿಕ ಮಾಧ್ಯಮದಲ್ಲಿ ಹಿಂದೂ ದೇವತೆಗಳ ಅವಹೇಳನ: ಆರೋಪಿ ವಿರುದ್ಧ ಎಫ್‌ಐಆರ್‌

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2024, 16:09 IST
Last Updated 25 ನವೆಂಬರ್ 2024, 16:09 IST
ಎಫ್‌ಐಆರ್‌ (ಪ್ರಾತಿನಿಧಿಕ ಚಿತ್ರ)
ಎಫ್‌ಐಆರ್‌ (ಪ್ರಾತಿನಿಧಿಕ ಚಿತ್ರ)   

ಬೆಂಗಳೂರು: ಸಾಮಾಜಿಕ ಮಾಧ್ಯಮದಲ್ಲಿ ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಸಿ, ಅವಹೇಳನ ಮಾಡಿದ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪದಾಧಿಕಾರಿಗಳು ಮಹಾಲಕ್ಷ್ಮಿ ಲೇಔಟ್‌ ಠಾಣೆ ಪೊಲೀಸರಿಗೆ ದೂರು ಸಲ್ಲಿಸಿದ್ದು, ಈ ಸಂಬಂಧ ಎಫ್‌ಐಆರ್‌ ದಾಖಲಾಗಿದೆ.

ಮಹಾಸಭಾದ ಉಪಾಧ್ಯಕ್ಷ ಬಿ.ಎಸ್.ರಾಘವೇಂದ್ರ ಭಟ್ ಎಂಬುವವರು ನೀಡಿದ ದೂರಿನ ಮೇರೆಗೆ ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಅಂಜುಂ ಶೇಕ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯ ಪತ್ತೆಗೆ ಶೋಧ ನಡೆಸುತ್ತಿದ್ದಾರೆ ಎಂದು ಗೊತ್ತಾಗಿದೆ.

‘ಫೇಸ್‌ಬುಕ್‌ನಲ್ಲಿ ಆರೋಪಿ ಅಂಜುಂ ಶೇಕ್ ಎಂಬಾತ ಶೃಂಗೇರಿಯ ಶಾರದಾಂಬೆ, ಕೊಲ್ಲೂರು ಮೂಕಾಂಬಿಕೆ, ತಿರುಪತಿ ತಿಮ್ಮಪ್ಪ, ಹೊರನಾಡು ಅನ್ನಪೂರ್ಣೇಶ್ವರಿ, ಕಟೀಲು ದುರ್ಗಾಪರಮೇಶ್ವರಿ ಮತ್ತು ಗಣಪತಿ ದೇವರ ಬಗ್ಗೆ ಅಶ್ಲೀಲ ಪದ ಬಳಸಿ ಟೀಕಿಸಿದ್ದಾನೆ. ಇದರಿಂದ ಹಿಂದೂ ಸಮುದಾಯವರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ. ಎರಡೂ ಧರ್ಮಗಳ ಮಧ್ಯೆ ಕೋಮುದ್ವೇಷ ಬಿತ್ತುವ ಉದ್ದೇಶದಿಂದ ಆರೋಪಿ ಕೆಟ್ಟ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾನೆ. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ರಾಘವೇಂದ್ರ ಭಟ್ ನೀಡಿರುವ ದೂರು ಆಧರಿಸಿ, ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.