ADVERTISEMENT

ವೈದ್ಯರ ನಿರ್ಲಕ್ಷ್ಯ ಆರೋಪ|ಪ್ರಕರಣ ದಾಖಲಿಸಿಕೊಳ್ಳದ ಪೊಲೀಸರು;ಶವ ಇಟ್ಟು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2024, 11:33 IST
Last Updated 22 ಏಪ್ರಿಲ್ 2024, 11:33 IST
   

ಬೆಂಗಳೂರು: ‘ಹಲ್ಲು ನೋವಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಯೊಬ್ಬರು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದು, ಈ ಬಗ್ಗೆ ದೂರು ನೀಡಿದರೂ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುತ್ತಿಲ್ಲ’ ಎಂದು ಆರೋಪಿಸಿ ಸುಬ್ರಹ್ಮಣ್ಯನಗರ ಠಾಣೆ ಎದುರು ಮೃತದೇಹ ಇರಿಸಿ ಸಂಬಂಧಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.

‘ಸುಬ್ರಮಣ್ಯ ನಗರದ ಕುಮಾರ್ (55) ಹಲ್ಲು ನೋವಿನ ಚಿಕಿತ್ಸೆಗೆಂದು ಇತ್ತೀಚೆಗೆ ಆಸ್ಪತ್ರೆಯೊಂದಕ್ಕೆ ಹೋಗಿದ್ದರು. ತಪಾಸಣೆ ನಡೆಸಿದ್ದ ವೈದ್ಯ, ಹಲ್ಲು ನೋವಿಗೆ ಚಿಕಿತ್ಸೆ ಕೊಟ್ಟು ಕಳುಹಿಸಿದ್ದರು. ಮರುದಿನವೇ ಮುಖ ಊದಿಕೊಂಡಿತ್ತು. ಕಣ್ಣಿಗೂ ಹಾನಿಯಾಗಿತ್ತು’ ಎಂದು ಸಂಬಂಧಿಕರೊಬ್ಬರು ಹೇಳಿದರು.

‘ಮುಖ ಊದಿಕೊಂಡಿದ್ದರಿಂದ ಕುಮಾರ್ ಅವರನ್ನು ಬೇರೊಂದು ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಗಿತ್ತು. ಆರೋಗ್ಯ ತೀವ್ರ ಹದಗೆಟ್ಟಿದ್ದರಿಂದ ಕುಮಾರ್ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ದಂತ ವೈದ್ಯರ ನಿರ್ಲಕ್ಷ್ಯದಿಂದ ಜೀವಕ್ಕೆ ಅಪಾಯ ಉಂಟಾಗಿರುವುದಾಗಿ ವೈದ್ಯರು ಹೇಳಿದ್ದರು. ಹೀಗಾಗಿ, ದಂತ ವೈದ್ಯರ ವಿರುದ್ಧ ದೂರು ನೀಡಲು ಠಾಣೆಗೆ ಹೋಗಿದ್ದೆವು’ ಎಂದು ತಿಳಿಸಿದರು.

ADVERTISEMENT

‘ಸುಬ್ರಹ್ಮಣ್ಯನಗರ ಠಾಣೆಯ ಪೊಲೀಸರು, ವೈದ್ಯರ ವಿರುದ್ಧ ದೂರು ಪಡೆಯಲು ನಿರಾಕರಿಸಿದರು. ಯಾವುದೇ ಪ್ರತಿಕ್ರಿಯೆ ಸಹ ನೀಡಲಿಲ್ಲ. 10 ದಿನ ತೀವ್ರ ನಿಗಾ ಘಟಕದಲ್ಲಿದ್ದ ಕುಮಾರ್ ಅವರು ಸೋಮವಾರ ಮೃತಪಟ್ಟಿದ್ದಾರೆ. ಹೀಗಾಗಿ, ಮೃತದೇಹವನ್ನು ಠಾಣೆಗೆ ಬಳಿ ತಂದು ಪ್ರತಿಭಟನೆ ನಡೆಸುತ್ತಿದ್ದೇವೆ’ ಎಂದು ಹೇಳಿದರು.

ಪೊಲೀಸರ ಅಮಾನತಿಗೆ ಆಗ್ರಹ:

‘ತೀವ್ರ ನಿಗಾ ಘಟಕದಲ್ಲಿದ್ದ ಕುಮಾರ್ ನೀಡಿದ್ದ ಹೇಳಿಕೆ ಆಧರಿಸಿ ದೂರು ದಾಖಲಿಸಿಕೊಳ್ಳುವಂತೆ ಪೊಲೀಸರನ್ನು ಕೋರಲಾಗಿತ್ತು. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ತಪ್ಪಿತಸ್ಥ ಪೊಲೀಸರನ್ನು ಅಮಾನತು ಮಾಡಬೇಕು’ ಎಂದು ಸಂಬಂಧಿಕರು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.