ಬೆಂಗಳೂರು: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ ಮತ್ತಿತರ ಸೌಲಭ್ಯ ಮಂಜೂರು ಬಾಕಿ ಇದ್ದು, ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ನಗರದ ಅಲ್ಪಸಂಖ್ಯಾತ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನೇತೃತ್ವದಲ್ಲಿ ಪ್ರತಿಭಟಿಸಿದ ವಿದ್ಯಾರ್ಥಿಗಳು ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
‘ಉನ್ನತ ಶಿಕ್ಷಣ ಪಡೆಯಲು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಡಿಯಲ್ಲಿ ನೀಡಲಾಗುವ ಅರಿವು ಶಿಕ್ಷಣ ಸಾಲದ ಯೋಜನೆ ಮತ್ತು ಸರ್ಕಾರನೀಡುವ ವಿದ್ಯಾರ್ಥಿ ವೇತನದ ಮೇಲೆ ಅವಲಂಬಿತರಾಗಿದ್ದೇವೆ. ಅರಿವು ಯೋಜನೆಯಡಿ ಸಾಲ ಪಡೆಯಲು 2019ರಲ್ಲಿಯೇ ಅರ್ಜಿ ಸಲ್ಲಿಸಿದ್ದರೂ ಇನ್ನೂ ಹಣ ದೊರಕದೆ ಇರುವುದರಿಂದ ಸಂಕಷ್ಟಕ್ಕೆ ಈಡಾಗಿದ್ದೇವೆ’ ಎಂದು ವಿದ್ಯಾರ್ಥಿಗಳು ಹೇಳಿದರು.
‘ಎಂ.ಪಿಲ್ /ಪಿ.ಎಚ್.ಡಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಫೆಲೋಶಿಪ್ ಶೇಕಡ 67 ರಷ್ಟು ಕಡಿತಗೊಳಿಸುವ ಮೂಲಕ ಸರ್ಕಾರ ಅಲ್ಪಸಂಖ್ಯಾತರ ಬಗ್ಗೆ ತಾರತಮ್ಯ ತೋರುತ್ತಿದೆ’ ಎಂದು ದೂರಿದರು.
ವಿದ್ಯಾರ್ಥಿ ವೇತನದ ವಿಳಂಬದ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಅಧಿಕಾರಿಗಳು ಭರವಸೆ ನೀಡಿದರು.
ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಬಾಷಾ ಗಂಗಾವತಿ, ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಆಕಿಬ್ ಬೆಂಗಳೂರು, ಕಾರ್ಯದರ್ಶಿ ಝಿಸಾನ್, ರಾಮನಗರ ಜಿಲ್ಲಾ ಘಟಕದ ಅಧ್ಯಕ್ಷ ಮುಹೀನ್ ಮಾಗಡಿ, ಕೋಲಾರ ಜಿಲ್ಲಾ ಘಟಕದ ಅಧ್ಯಕ್ಷ ಸವೂದ್ , ಬೆಂಗಳೂರು ಗ್ರಾಮಾಂತರ ಘಟಕದ ಅಧ್ಯಕ್ಷ ಮನ್ಸೂರ್ ಹಾಗೂ ಹಲವಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.