ADVERTISEMENT

ಶಾಸಕ ಗಣೇಶ್ ಜಾಮೀನು ಅರ್ಜಿ ವಿಚಾರಣೆ: ಬಿಡದಿ ಪೊಲೀಸ್‌ಗೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2019, 20:33 IST
Last Updated 1 ಏಪ್ರಿಲ್ 2019, 20:33 IST
   

ಬೆಂಗಳೂರು: ಹೊಸಪೇಟೆಯ ವಿಜಯನಗರ ಕ್ಷೇತ್ರದ ಶಾಸಕ ಆನಂದ ಸಿಂಗ್ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಕುರಿತ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ಪ್ರತಿವಾದಿಗಳಾದ ಬಿಡದಿ ಪೊಲೀಸ್ ಠಾಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ಇದೇ 8ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಆದೇಶಿಸಿದೆ.

ವಿಚಾರಣೆ ವೇಳೆ ಗಣೇಶ್ ಪರ ವಕೀಲರು, ‘ಅರ್ಜಿದಾರರು, ಶಾಸಕರಾಗಿದ್ದು, ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಬೇಕಿದೆ. ಆದ್ದರಿಂದ ಜಾಮೀನು ನೀಡಬೇಕು’ ಎಂದು ಕೋರಿದರು.

ADVERTISEMENT

ಅಂತಿಮ ವಿಚಾರಣೆಯನ್ನು ಇದೇ 8ಕ್ಕೆ ಮುಂದೂಡಲಾಗಿದೆ.

ಈ ಮುನ್ನ ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದಲ್ಲಿ ಗಣೇಶ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ.

ಕಾಂಗ್ರೆಸ್‌ ಪಕ್ಷದ ಶಾಸಕರುಗಳಾದ ಗಣೇಶ್‌ ಮತ್ತು ಆನಂದ ಸಿಂಗ್‌ ಇತ್ತೀಚೆಗೆ ಈಗಲ್‌ಟನ್ ರೆಸಾರ್ಟ್‌ನಲ್ಲಿ ಪರಸ್ಪರ ಕಾದಾಡಿಕೊಂಡಿದ್ದರು.

ಈ ಸಂದರ್ಭದಲ್ಲಿ, ‘ಗಣೇಶ್ ಅವರು, ಆನಂದ ಸಿಂಗ್ ಮೇಲೆ ಹಲ್ಲೆ ನಡೆಸಿದರು’ ಎಂಬ ಆರೋಪ ಎದುರಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.