ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಕೈದಿಗಳ ಬಳಿ ಮೊಬೈಲ್, ಇಯರ್ ಫೋನ್ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಚಾಕು ಪತ್ತೆಯಾದ ಕುರಿತು ತನಿಖೆ ನಡೆಯುತ್ತಿದೆ ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ತಿಳಿಸಿದರು.
ಪೊಲೀಸರು ಕಾರಾಗೃಹದ ಮೇಲೆ ದಾಳಿಮಾಡಿ ಶೋಧ ನಡೆಸಿದಾಗ ನಿಷೇಧಿತ ವಸ್ತುಗಳು ಪತ್ತೆಯಾಗಿವೆ. ಜೈಲಾಧಿಕಾರಿಗಳು, ಭದ್ರತಾ ಸಿಬ್ಬಂದಿ, ಸಂಬಂಧಪಟ್ಟ ಬ್ಯಾರಕ್ನಲ್ಲಿರುವ ಕೈದಿಗಳ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಹಾಗೂ ಸಹಚರರಿಗೆ ವಿಶೇಷ ಆತಿಥ್ಯ ನೀಡಿದ್ದ ಫೋಟೊ ಬಹಿರಂಗವಾದ ಕಾರಣ ಕಾರಾಗೃಹದ ಮೇಲೆ ಪೊಲೀಸರು ನಿಗಾ ವಹಿಸಿದ್ದರು. ಶನಿವಾರ ಆಗ್ನೇಯ ವಿಭಾಗದ ಪೊಲೀಸ್ ತಂಡ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಹಾಗೂ ಆತನ ಸಹಚರರ ಮೊಬೈಲ್ ಫೋನ್ ಜೊತೆಗೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.