ಬೆಂಗಳೂರು: ಕುಡಿಯುವ ನೀರಿನ ದರ ಏರಿಕೆ ಮಾಡದೆ ನಗರದ ಜನರಿಗೆ ನೀರಿನ ಪೂರೈಕೆ ಮಾಡಲು ಅಸಾಧ್ಯವನಿಸಿದರೆ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಕೂಡಲೇ ರಾಜೀನಾಮೆ ನೀಡಲಿ ಎಂದು ಆಮ್ ಅದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆಗ್ರಹಿಸಿದ್ದಾರೆ.
‘ಮೈಸೂರು ಮಹಾರಾಜರ ರೀತಿಯಲ್ಲಿ ತಮ್ಮ ಆಸ್ತಿಪಾಸ್ತಿಗಳನ್ನೆಲ್ಲ ಅಡವಿಟ್ಟು ಬೆಂಗಳೂರಿಗೆ ನೀರು ಪೂರೈಕೆ ಮಾಡುತ್ತಿದ್ದೇನೆಂಬ ಅಹಂ ಭಾವನೆಯಲ್ಲಿ ಡಿ.ಕೆ.ಶಿವಕುಮಾರ್ ಇದ್ದಂತೆ ಕಾಣುತ್ತಿದೆ. ನೀರು ಪೂರೈಕೆ ಮಾಡುವುದು ಸರ್ಕಾರದ ಕರ್ತವ್ಯ. ಬೆಂಗಳೂರಿಗೆ ಸಂಬಂಧವಿಲ್ಲದವರು ಬೆಂಗಳೂರು ಅಭಿವೃದ್ಧಿ ಮಾಡಲು ಹೊರಟಾಗ ಈ ರೀತಿ ಆಗುತ್ತದೆ’ ಎಂದು ಪತ್ರಿಕಾ ಹೇಳಿಕೆಯಲ್ಲಿ ಟೀಕಿಸಿದ್ದಾರೆ.
‘ಮೇಕೆದಾಟು ಹೆಸರಿನಲ್ಲಿ ಪಾದಯಾತ್ರೆ ಮಾಡುವ ಮೂಲಕ ಅಧಿಕಾರ ಪಡೆದುಕೊಂಡ ಶಿವಕುಮಾರ್, ಈ ಕೂಡಲೇ ನಗರದ ಜನರ ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ ಆಮ್ ಆದ್ಮಿ ಪಕ್ಷ ಹೋರಾಟ ಆರಂಭಿಸುತ್ತದೆ. ಬೆಂಗಳೂರು ಜಲಮಂಡಳಿಯ ವ್ಯಾಪಕ ಭ್ರಷ್ಟಾಚಾರಗಳನ್ನು ತಡೆಗಟ್ಟುವುದನ್ನು ಬಿಟ್ಟು, ಕುಡಿಯುವ ನೀರಿನ ದರ ಹೆಚ್ಚಿಸಲು ಸರ್ಕಾರ ಮುಂದಾದಲ್ಲಿ ಪಕ್ಷದ ವತಿಯಿಂದ ಹೋರಾಟ ನಡೆಸಲಾಗುವುದು’ ಎಂದು ಅವರು ಎಚ್ಚರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.