ADVERTISEMENT

ಮಂಕಿಪಾಕ್ಸ್‌: ವಿಮಾನ ನಿಲ್ದಾಣಗಳಲ್ಲಿ ನಿಗಾ ವಹಿಸಲು ಸಚಿವ ಗುಂಡೂರಾವ್ ಸೂಚನೆ

ಜನರು ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ: ಸಚಿವ ದಿನೇಶ್‌ ಗುಂಡೂರಾವ್

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2024, 17:09 IST
Last Updated 19 ಆಗಸ್ಟ್ 2024, 17:09 IST
ನಗರದಲ್ಲಿ ಸೋಮವಾರ ಆರೋಗ್ಯ ಸಚಿವ ಆರ್‌. ದಿನೇಶ್ ಗುಂಡೂರಾವ್ ಅವರು ಅಧಿಕಾರಿಗಳ ಸಭೆ ನಡೆಸಿದರು. 
ನಗರದಲ್ಲಿ ಸೋಮವಾರ ಆರೋಗ್ಯ ಸಚಿವ ಆರ್‌. ದಿನೇಶ್ ಗುಂಡೂರಾವ್ ಅವರು ಅಧಿಕಾರಿಗಳ ಸಭೆ ನಡೆಸಿದರು.    

ಬೆಂಗಳೂರು: ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿಲ್ಲ. ಒಂದು ವೇಳೆ ಪತ್ತೆಯಾದರೆ ಅದಕ್ಕೆ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾಸ್ಪತ್ರೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಆಸ್ಪತ್ರೆಗಳಲ್ಲಿ ವೈದ್ಯರಿಗೆ ತರಬೇತಿ ನೀಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದರು.

ಹೊರದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾದ ಕಾರಣದಿಂದ ಆರೋಗ್ಯ ಅಧಿಕಾರಿಗಳ ಜೊತೆ ಸೋಮವಾರ ಸಭೆ ನಡೆಸಿ, ಮುಂಜಾಗೃತಾ ಕ್ರಮಗಳ ಕುರಿತು ಚರ್ಚೆ ನಡೆಸಿದರು.

ದೇಶದಲ್ಲಿ ಆರೋಗ್ಯ ತುರ್ತುಸ್ಥಿತಿ ಘೋಷಿಸುವ ಪರಿಸ್ಥಿತಿ ಇಲ್ಲ. ಆದರೆ, ಹೊರ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣದಿಂದ ವಿಶ್ವ ಆರೋಗ್ಯ ಸಂಸ್ಥೆ ಆರೋಗ್ಯ ತುರ್ತುಸ್ಥಿತಿ ಘೋಷಿಸಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯದಲ್ಲಿ ಈಗಿನಿಂದಲೇ ಮುಂಜಾಗ್ರತೆ ವಹಿಸಬೇಕು. ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಮೇಲೆ ನಿಗಾ ಇರಿಸಬೇಕು. ಮಂಕಿಪಾಕ್ಸ್ ವೈರಾಣು ಗುಣಲಕ್ಷಣಗಳು ಕಂಡು ಬಂದರೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

ರಾಜ್ಯದಲ್ಲಿ ಒಂಬತ್ತು ಝೀಕಾ ಪ್ರಕರಣಗಳು ಪತ್ತೆಯಾಗಿದ್ದು, ಶಿವಮೊಗ್ಗದಲ್ಲಿ ಮೂರು ಹಾಗೂ ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ ಆರು ಮಂದಿಗೆ ಝೀಕಾ ವೈರಾಣು ಸೋಂಕು ದೃಢಪಟ್ಟಿದೆ. ಈ ಪೈಕಿ ಐವರು ಮಹಿಳೆಯರಿಗೆ ಸೋಂಕು ತಗುಲಿದ್ದು, ಇವರ ಸಂಪರ್ಕಕ್ಕೆ ಬಂದವರ ತಪಾಸಣೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಪ್ರಾದೇಶಿಕ ನಿರ್ದೇಶಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.