ಬೆಂಗಳೂರು: ‘ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯ ಅವರನ್ನು ದುರ್ಬಲಗೊಳಿಸುವ ಕುತಂತ್ರವನ್ನು ಬಿಜೆಪಿ, ಜೆಡಿಎಸ್ ನಾಯಕರು ನಿಲ್ಲಿಸದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ಹಾಗೂ ಶೋಷಿತ ಸಮುದಾಯಗಳ ಎಚ್ಚರಿಕೆ ಸಮಾವೇಶ ಹಮ್ಮಿಕೊಳ್ಳಲಾಗುತ್ತದೆ ಎಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಎಚ್ಚರಿಕೆ ನೀಡಿದೆ.
ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ. ರಾಮಚಂದ್ರಪ್ಪ, ‘ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ಹೆಸರನ್ನು ತಳಕು ಹಾಕಲಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷದ ನಾಯಕರು ಅಧಿಕಾರ ಕಳೆದುಕೊಂಡು ವಿಲವಿಲ ಒದ್ದಾಡುತ್ತಿದ್ದಾರೆ. ತಮ್ಮ ಮೇಲಿನ ಆರೋಪಕ್ಕೆ ಸ್ವತಃ ತನಿಖಾ ಆಯೋಗ ರಚಿಸಿರುವ ದೇಶದ ಏಕೈಕ ನಾಯಕ ಸಿದ್ದರಾಮಯ್ಯ. ಹಿಂದೆಯೂ ಹಿಂದುಳಿದ ವರ್ಗದ ನಾಯಕರಾದ ದೇವರಾಜ ಅರಸು, ಎಸ್. ಬಂಗಾರಪ್ಪ, ವೀರಪ್ಪ ಮೊಯಿಲಿ, ಧರ್ಮ ಸಿಂಗ್ ಮತ್ತಿತರರ ವಿರುದ್ಧ ಇಂತಹದೇ ಷಡ್ಯಂತ್ರ ರೂಪಿಸಲಾಗಿತ್ತು. ಈಗ ಶೋಷಿತ ಸಮುದಾಯ ಜಾಗೃತವಾಗಿದ್ದು, ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ತರುವ ಕುತಂತ್ರವನ್ನು ಮುಂದುವರಿಸಿದರೆ ದಂಗೆ ಏಳಬೇಕಾಗುತ್ತದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸ್ವತಃ ಸಿದ್ದರಾಮಯ್ಯ ಅವರೇ ದಾಖಲೆ ಸಹಿತ ವಿವರಣೆ ನೀಡಿದ್ದಾರೆ. ಇಷ್ಟಾಗಿಯೂ ಅವರ ವಿರುದ್ಧ ರಾಜಕೀಯ ದುರುದ್ದೇಶದಿಂದ ಪಾದಯಾತ್ರೆ ಮಾಡಲಾಗುತ್ತಿದೆ. ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆಯೂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಹೇಳಲು ಆರೋಪಿಗಳ ಮೇಲೆ ಇಡಿ ಅಧಿಕಾರಿಗಳು ಒತ್ತಡ ಹೇರಿದ್ದರು. ಆದ್ದರಿಂದ ಎಚ್ಚರಿಕೆ ಸಮಾವೇಶವನ್ನು ಯಾವ ರೀತಿ ಮಾಡಬೇಕೆಂದು ಚರ್ಚಿಸಿ, ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಆಗ್ರಹಿಸಿದರು.
ಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕರ್, ‘ರಾಜಕೀಯ ದುರುದ್ದೇಶದಿಂದ ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡಲಾಗುತ್ತಿದೆ. ಅವರನ್ನು ಅಧಿಕಾರದಿಂದ ಕೆಳಗಿಳಿಸಿ, ಹಿಂದುಳಿದ ವರ್ಗದ ನಾಯಕತ್ವವನ್ನು ಕೊನೆಗಾಣಿಸಲು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಅವರ ವಿರುದ್ಧ ಮುಗಿ ಬಿದ್ದಿದ್ದಾರೆ. ಹಿಂದುಳಿದವರ ದನಿ ಅಡಗಿಸಲು ಷಡ್ಯಂತ್ರ ರೂಪಿಸಿದವರೇ ಸ್ವತಃ ಕಳಂಕಿತರು. ಇವರ ಮೇಲಿನ ಆರೋಪಗಳನ್ನೂ ನಾವು ಬಯಲಿಗೆ ಎಳೆಯುತ್ತೇವೆ’ ಎಂದು ಹೇಳಿದರು.
ಒಕ್ಕೂಟದ ಸಂಚಾಲಕರಾದ ಅನಂತನಾಯ್ಕ್ ಎನ್., ಎಣ್ಣೆಗೆರೆ ಆರ್. ವೆಂಕಟರಾಮಯ್ಯ, ಅಬ್ದುಲ್ ಮನಾನ್‌ಸೇಠ್, ಬಿ.ಟಿ. ಲಲಿತಾನಾಯಕ್, ಸದಸ್ಯ ಆದರ್ಶ್ ಯಲ್ಲಪ್ಪ, ಕೆ.ವೆಂಕಟಸುಬ್ಬರಾಜು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.