ಬೆಂಗಳೂರು: ‘ರಾಜ್ಯ ಅಲ್ಪಸಂಖ್ಯಾತರ ಆಯೋಗಕ್ಕೆ ಮುಸ್ಲಿಂ ಸಮುದಾಯದವರನ್ನೇ ಅಧ್ಯಕ್ಷರನ್ನಾಗಿ ನೇಮಕ ಮಾಡುವುದನ್ನು ಸಮರ್ಥಿಸಿಕೊಂಡು ಅಂಗೀಕರಿಸಲಾಗಿದ್ದ ನಿರ್ಣಯವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಾಪಸು ಪಡೆದುಕೊಳ್ಳಲಾಗುವುದು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಈ ಕುರಿತಂತೆ ಶಿವಮೊಗ್ಗದ ವಕೀಲ ಬಿ.ವಿನೋದ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ರವಿ ಮಳಿಮಠ ಹಾಗೂ ನ್ಯಾಯಮೂರ್ತಿ ಬಿ.ಎಂ.ಶ್ಯಾಮಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಿದ್ದ ವಕೀಲರು, ‘ಈ ವಿಷಯಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ಮನವಿಯನ್ನು ಹೊಸದಾಗಿ ಪರಿಗಣಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
‘ಆಯೋಗಕ್ಕೆ ಕೇವಲ ಮುಸ್ಲಿಮರನ್ನೇ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತಿದೆ. ಸರತಿ ಆಧಾರದಲ್ಲಿ ಇತರೆ ಅಲ್ಪಸಂಖ್ಯಾತ ಸಮುದಾಯಗಳಿಗೂ ಅವಕಾಶ ಕಲ್ಪಿಸಲು ನಿರ್ದೇಶಿಸಬೇಕು’ ಎಂಬುದು ಅರ್ಜಿದಾರರ ವಾದ.
‘ಅಲ್ಪಸಂಖ್ಯಾತ ಸಮುದಾಯಗಳಾದ ಕ್ರಿಶ್ಚಿಯನ್, ಜೈನ್, ಬೌದ್ಧ ಮತ್ತು ಸಿಖ್ ಸಮುದಾಯಕ್ಕೆ ಸೇರಿದವರಿಗೂ ಸರತಿ ಆಧಾರದ ಮೇಲೆ ಅವಕಾಶ ನೀಡಬೇಕು’ ಎಂದು ವಿನೋದ್ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಮನವಿ ಸಲ್ಲಿಸಿದ್ದರು. ಆ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಕಾರಣ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ವಿಚಾರಣೆ ನಡೆಸಿದ್ದ ನ್ಯಾಯಪೀಠ, ‘ಅರ್ಜಿದಾರರ ಮನವಿ ಪರಿಗಣಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ’ ಎಂದು ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತ್ತು. ಇದರ ಅನುಸಾರ ಅರ್ಜಿದಾರರ ಮನವಿ ಆಲಿಸಿದ್ದ ಇಲಾಖೆ, ಆಯೋಗಕ್ಕೆ ಮುಸ್ಲಿಂ ಸಮುದಾಯದ ವ್ಯಕ್ತಿಗಳನ್ನು ಮಾತ್ರ ಅಧ್ಯಕ್ಷರನ್ನಾಗಿ ನೇಮಕ ಮಾಡುವುದನ್ನು ಸಮರ್ಥಿಸಿಕೊಂಡಿತ್ತು.
‘ರಾಜ್ಯದಲ್ಲಿರುವ ಆರು ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಮುಸ್ಲಿಮರೇ ಅಧಿಕ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಮುಸ್ಲಿಂ ಸಮುದಾಯದ ವ್ಯಕ್ತಿಗಳನ್ನೇ ನೇಮಕ ಮಾಡುವುದು ರೂಢಿಗತ ಪದ್ಧತಿಯಾಗಿ ನಡೆದುಕೊಂಡು ಬಂದಿದೆ’ ಎಂದು 2017ರ ಜುಲೈ 14ರಂದು ನಿರ್ಧಾರ ಕೈಗೊಳ್ಳಲಾಗಿತ್ತು.
ಈ ನಿರ್ಧಾರವನ್ನು ಮತ್ತೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿಲಾಗಿದೆ. ಅರ್ಜಿದಾರರ ಪರ ಎಂ.ಅರುಣ್ ಶ್ಯಾಮ್ ವಾದ ಮಂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.