ಬೆಂಗಳೂರು: ‘ದೇಶ ಭಕ್ತಿಯ ನೆಪದಲ್ಲಿ ಮಾತೃ ಭಾಷೆ ಕಡೆಗಣಿಸಬಾರದು. ಕರ್ನಾಟಕ ರಾಜ್ಯೋತ್ಸವ ನಿತ್ಯೋತ್ಸವವಾಗಲಿ’ ಎಂದು ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಹೇಳಿದರು.
ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜು ಮತ್ತು ಕಾನೂನು ಅಧ್ಯಯನ ವಿಭಾಗವು ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶನಿವಾರ ಆಯೋಜಿಸಿದ್ದ ‘ಕನ್ನಡ ಕಲರವ–8’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಕನ್ನಡ ರಾಜ್ಯೋತ್ಸವ ಕೇವಲ ನವೆಂಬರ್ ಒಂದಕ್ಕೆ ಮಾತ್ರ ಸೀಮಿತವಾಗಬಾರದು. ನಾವು ಕನ್ನಡ ಭಾಷೆಯನ್ನು ಹೆಚ್ಚು ಬಳಸಬೇಕು. ಜತೆಗೆ ಕೆಳಹಂತದ ನ್ಯಾಯಾಲಯಗಳಲ್ಲಿ ಕನ್ನಡ ಭಾಷೆಯ ಬಳಕೆ ಮಾಡಬೇಕು. ನಮ್ಮ ಭಾಷೆ ಮತ್ತು ಬೇರೆ ಭಾಷೆಗಳ ನಡುವೆ ಸಮನ್ವಯತೆಯನ್ನು ಕಾಪಾಡಿಕೊಳ್ಳಬೇಕು’ ಎಂದು ಕರೆ ನೀಡಿದರು.
ಕವಿ ಎಲ್.ಎನ್. ಮುಕುಂದರಾಜ್, ‘ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದೆ. ಕನ್ನಡ ಸಂಸ್ಕೃತಿ, ನೆಲ, ಜಲದ ಪರಿಚಯವನ್ನು ಇಂದಿನ ಮಕ್ಕಳಿಗೆ ಯಥಾವತ್ತಾಗಿ ತಲುಪಿಸುವ ಕೆಲಸವಾಗಬೇಕು. ಮಕ್ಕಳಿಗೆ ಕಡ್ಡಾಯವಾಗಿ ಕನ್ನಡ ಕಲಿಸಬೇಕು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.