ಬೆಂಗಳೂರು: ರಾಜರಾಜೇಶ್ವರಿ ನಗರದ ‘ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್’ಗೆ ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಬಾಲಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆತನೇ ಇ-ಮೇಲ್ ಕಳುಹಿಸಿದ್ದನೆಂಬ ಮಾಹಿತಿ ತನಿಖೆಯಿಂದ ಗೊತ್ತಾಗಿದೆ.
ಬೆಳಿಗ್ಗೆ 9 ಗಂಟೆ ಸುಮಾರಿಗೆ ಶಾಲಾ ಸಿಬ್ಬಂದಿ, ಇ-ಮೇಲ್ ಪರಿಶೀಲಿಸುತ್ತಿದ್ದರು. ಇದೇ ವೇಳೆ ಅಪರಿಚಿತರೊಬ್ಬರು ಕಳುಹಿಸಿದ್ದ ಇ-ಮೇಲ್ ತೆರೆದಿದ್ದರು.
‘ನಿಮ್ಮ ಶಾಲೆಯಲ್ಲಿ ಬಾಂಬ್ ಇರಿಸಲಾಗಿದೆ. ಸದ್ಯದಲ್ಲೇ ಅದು ಸ್ಫೋಟ ಆಗಲಿದೆ’ ಎಂದು ಬೆದರಿಕೆ ಹಾಕಲಾಗಿತ್ತು. ಆತಂಕಗೊಂಡ ಶಾಲಾ ಸಿಬ್ಬಂದಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ ಸಿಬ್ಬಂದಿ, ಮಕ್ಕಳನ್ನು ಬೇರೆ ಸ್ಥಳಾಂತರಿಸಿ ಶೋಧ ಮಾಡಿದ್ದರು. ಹುಸಿ ಬಾಂಬ್ ಎಂದು ಪೊಲೀಸರು ಘೋಷಿಸಿದ್ದರು.
‘ಬಾಂಬ್ ಬೆದರಿಕೆ ಸಂಬಂಧ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಆತನ ಹೆಸರು ಬಹಿರಂಗಪಡಿಸಲಾಗದು’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.