ADVERTISEMENT

ನೇಹಾ ಹತ್ಯೆ ಪ್ರಕರಣ: ಗೃಹ ಸಚಿವ ಜಿ. ಪರಮೇಶ್ವರ್ ಮನೆ ಮುತ್ತಿಗೆಗೆ ಯತ್ನ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2024, 9:32 IST
Last Updated 20 ಏಪ್ರಿಲ್ 2024, 9:32 IST
<div class="paragraphs"><p>ಎಬಿವಿಪಿ ಕಾರ್ಯಕರ್ತರು ಗೃಹ ಸಚಿವ ಜಿ. ಪರಮೇಶ್ವರ್ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.</p></div>

ಎಬಿವಿಪಿ ಕಾರ್ಯಕರ್ತರು ಗೃಹ ಸಚಿವ ಜಿ. ಪರಮೇಶ್ವರ್ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.

   

ಬೆಂಗಳೂರು: ‘ನೇಹಾ ಹತ್ಯೆ ಪ್ರಕರಣದಲ್ಲಿ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪೋಷಕರಿಗೆ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿ ಶನಿವಾರ ಪ್ರತಿಭಟನೆ ನಡೆಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು, ಗೃಹ ಸಚಿವ ಜಿ. ಪರಮೇಶ್ವರ್ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.

ನಗರದಲ್ಲಿರುವ ಗೃಹ ಸಚಿವರ ಮನೆ ಎದುರು ಬೆಳಿಗ್ಗೆ ಸೇರಿದ್ದ ಪ್ರತಿಭಟನಕಾರರು, ‘ನೇಹಾ ಹತ್ಯೆ ಆಕಸ್ಮಿಕವೆಂದು ಹೇಳಿರುವ ಗೃಹಸಚಿವರು ತಮ್ಮ ಹೇಳಿಕೆ ಹಿಂಪಡೆದು, ಕುಟುಂಬದವರ ಕ್ಷಮೆಯಾಚಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಹುಬ್ಬಳ್ಳಿ ಬಿವಿಬಿ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿ ನೇಹಾ ಹಿರೇಮಠ ಅವರನ್ನು ಅಮಾನುಷವಾಗಿ ಹತ್ಯೆ ಮಾಡಲಾಗಿದೆ. ಇಂಥ ಹತ್ಯೆಯನ್ನು ಆಕಸ್ಮಿಕವೆಂದು ಹೇಳಿ, ಪೋಷಕರಿಗೆ ಅನ್ಯಾಯ ಮಾಡಲಾಗುತ್ತಿದೆ. ಇದರ ವಿರುದ್ಧ ರಾಜ್ಯದಾದ್ಯಂತ ಎಬಿವಿಪಿ ಪ್ರತಿಭಟನೆಗೆ ಕರೆ ನೀಡಿದೆ’ ಎಂದು ಪ್ರತಿಭಟನಕಾರರು ಹೇಳಿದರು.

‘ನೇಹಾ ಹತ್ಯೆ ಪ್ರಕರಣದ ತನಿಖೆಯನ್ನು ತ್ವರಿತವಾಗಿ ಮುಗಿಸಬೇಕು. ತ್ವರಿತ ನ್ಯಾಯಾಲಯದ ಮೂಲಕ ವಿಚಾರಣೆ ನಡೆಸಿ, ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಮಾಡಬೇಕು. ನೊಂದ ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು’ ಎಂದು ತಿಳಿಸಿದರು.

ಪ್ರತಿಭಟನಕಾರರು ವಶಕ್ಕೆ: ಗೃಹ ಸಚಿವರ ಮನೆ ಎದುರು ಸೇರಿದ್ದ ಎಬಿವಿಪಿ ಕಾರ್ಯಕರ್ತರು, ಬ್ಯಾರಿಕೇಡ್‌ಗಳನ್ನು ತಳ್ಳಿ ಮನೆಯ ಗೇಟ್‌ ತೆರೆದು ಮುತ್ತಿಗೆ ಹಾಕಲು ಯತ್ನಿಸಿದರು. ಸ್ಥಳದಲ್ಲಿದ್ದ ಪೊಲೀಸರು, ಪ್ರತಿಭಟನಕಾರರನ್ನು ವಶಕ್ಕೆ ಪಡೆದು ಸ್ಥಳದಿಂದ ಕರೆದೊಯ್ದರು. ಕೆಲ ಗಂಟೆಗಳ ಬಳಿಕ ಎಲ್ಲರನ್ನೂ ಬಿಟ್ಟು ಕಳುಹಿಸಿದ್ದಾರೆ.

ಪೊಲೀಸರ ವರ್ತನೆಯನ್ನು ಖಂಡಿಸಿರುವ ಪ್ರತಿಭಟನಕಾರರು, ‘ನೇಹಾ ಹತ್ಯೆ ಮಾಡಿರುವ ಆರೋಪಿ ಫಯಾಜ್‌ನ ಮನೆಗೆ ಸರ್ಕಾರ ರಕ್ಷಣೆ ನೀಡಿದೆ. ನ್ಯಾಯ ಕೇಳಲು ಬಂದ ನಮ್ಮನ್ನು ಪೊಲೀಸರು ಎಳೆದುಕೊಂಡು ಹೋಗಿದ್ದರು. ಇದು ರಾಜ್ಯದ ಪರಿಸ್ಥಿತಿ. ವಿದ್ಯಾರ್ಥಿಗಳಿಗೆ ರಕ್ಷಣೆ ಇಲ್ಲದಂತಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.