ಬೆಂಗಳೂರು: ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರ ಮತ್ತು ನಾಡ ಕಚೇರಿಗಳಲ್ಲಿರುವ ಅಟಲ್‌ಜೀ ಜನಸ್ನೇಹಿ ಕೇಂದ್ರಗಳಲ್ಲಿ ಆನ್‌ಲೈನ್ ಸೇವೆಗಳನ್ನು ಕೋರಿ ಅರ್ಜಿ ಸಲ್ಲಿಸುವವರಿಂದ ಭೌತಿಕ ರೂಪದ ದಾಖಲೆಗಳನ್ನು ಕೇಳಬಾರದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ.
44 ಸೇವೆಗಳನ್ನು ಆನ್‌ಲೈನ್ ಮೂಲಕ ಒದಗಿಸಲು ಬಾಪೂಜಿ ಸೇವಾ ಕೇಂದ್ರ ಮತ್ತು ಅಟಲ್‌ಜಿ ಜನಸ್ನೇಹಿ ಕೇಂದ್ರಗಳ ಜತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚತಂತ್ರ 2.0 ತಂತ್ರಾಂಶವನ್ನು ಜೋಡಿಸಲಾಗಿದೆ. ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ತಂತ್ರಾಂಶದ ಮೂಲಕವೇ ವಿಲೇವಾರಿ ಮಾಡಬೇಕು. ನಿಗದಿತ ಅವಧಿಯೊಳಗೆ ಸೇವೆ ಒದಗಿಸಬೇಕು ಎಂಬ ಸೂಚನೆಯನ್ನು ಅಧಿಕಾರಿಗಳಿಗೆ ನೀಡಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಅನ್‌ಲೈನ್ ಮೂಲಕ ಸೇವೆಗಳನ್ನು ಕೋರಿ ಅರ್ಜಿ ಸಲ್ಲಿಸುವವರಿಗೆ ಭೌತಿಕವಾಗಿ ದಾಖಲೆ ಸಲ್ಲಿಸುವಂತೆ ಅಧಿಕಾರಿಗಳು ಸೂಚನೆ ನೀಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇದರಿಂದ ಸಾವಿರಾರು ಮಂದಿ ನಾಗರಿಕರು ನಾಡ ಕಚೇರಿ, ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಹೋಗಬೇಕಾಗಿದೆ. ನಿಗದಿತ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಿದವರಿಂದ ಮತ್ತೆ ಭೌತಿಕ ರೂಪದ ದಾಖಲೆ ಕೇಳುವಂತಿಲ್ಲ’ ಎಂದು ಹೇಳಿದ್ದಾರೆ.
ನಾಡ ಕಚೇರಿಗಳ ಅಟಲ್‌ಜಿ ಜನಸ್ನೇಹಿ ಕೇಂದ್ರಗಳ ಮೂಲಕ ನೀಡುತ್ತಿರುವ ಆದಾಯ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ವಾಸಸ್ಥಳ ಪ್ರಮಾಣಪತ್ರಗಳನ್ನು ಗ್ರಾಮ ಪಂಚಾಯಿತಿಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ವಿತರಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.