ಬೆಂಗಳೂರು: ‘ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಲ್ಲತ್ತಳ್ಳಿಯ ಕೆರೆ ಪ್ರದೇಶದಲ್ಲಿ ಬಯಲು ರಂಗಮಂದಿರ ಹಾಗೂ ಶಿವನ ಮೂರ್ತಿ ಪ್ರತಿಷ್ಠಾಪನೆ ಕಾರ್ಯದಲ್ಲಿ ಯಾವುದೇ ನಿಯಮ ಉಲ್ಲಂಘನೆ ಆಗಿಲ್ಲ’ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೈಕೋರ್ಟ್‌ಗೆ ತಿಳಿಸಿದೆ.
ಈ ಕುರಿತಂತೆ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಹಾಗೂ ಟಿ. ವೆಂಕಟೇಶ್ ನಾಯಕ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು ಪ್ರಮಾಣಪತ್ರ ಸಲ್ಲಿಸಿ, ‘ಶಿವನಮೂರ್ತಿಯು, ಕೆರೆ ಏರಿಯ ಪ್ರದೇಶದಿಂದ 52 ಮೀಟರ್ ದೂರದಲ್ಲಿದೆ. ಮೂರ್ತಿ ಸ್ಥಾಪನೆಯಿಂದ ಕೆರೆಗೆ ಯಾವುದೇ ಹಾನಿ ಆಗಲ್ಲ. ಈ ಕಾಮಗಾರಿ ಅನಧಿಕೃತವೂ ಅಲ್ಲ’ ಎಂದು ನ್ಯಾಯಪೀಠಕ್ಕೆ ಅರುಹಿದರು.
ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ‘ಬಿಬಿಎಂಪಿಯ ಪ್ರಮಾಣಪತ್ರಕ್ಕೆ ಒಂದು ವಾರದಲ್ಲಿ ಆಕ್ಷೇಪಣೆ ಸಲ್ಲಿಸಿ’ ಎಂದು ಅರ್ಜಿದಾರರ ಪರ ವಕೀಲ ಜಿ.ಆರ್. ಮೋಹನ್ ಅವರಿಗೆ ಸೂಚಿಸಿ ವಿಚಾರಣೆ ಮುಂದೂಡಿತು. ಈ ಪ್ರಕರಣದಲ್ಲಿ ಕಳೆದ ವಿಚಾರಣೆ ವೇಳೆ ಸಚಿವ ಮುನಿರತ್ನ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.