ADVERTISEMENT

ಕಾಡುಗಳ್ಳ ವೀರಪ್ಪನ್ ಕೇಸ್: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ವೀರಪ್ಪನ್‌ ದಾಳಿಯ ಸಂತ್ರಸ್ತ ಕುಟುಂಬದ ಮೊರೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2022, 2:30 IST
Last Updated 5 ಜನವರಿ 2022, 2:30 IST
   

ಬೆಂಗಳೂರು: ‘ಕಾಡುಗಳ್ಳ–ನರಹಂತಕ ವೀರಪ್ಪನ್ ನಡೆಸಿದ್ದ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದ ಪೊಲೀಸ್ ಕಾನ್‌ಸ್ಟೇಬಲ್ ಪುತ್ರನಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ಕಲ್ಪಿಸಿಲ್ಲ’ ಎಂಬ ಆಕ್ಷೇಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ಮಳವಳ್ಳಿಯ ಆರ್.ನಂದೀಶ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿಎಚ್.ಟಿ. ನರೇಂದ್ರ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಸ್‌.ವಿ.ಗಿರೀಶ್‌ ಕುಮಾರ್, ‘ಕೊಳ್ಳೇಗಾಲದ ರಾಮಾಪುರ ಪೊಲೀಸ್ ಠಾಣೆಯ ಮೇಲೆ 1992ರ ಮೇ 20ರಂದು ಕಾಡುಗಳ್ಳ ವೀರಪ್ಪನ್ ದಾಳಿ ನಡೆಸಿದ ಸಂದರ್ಭದಲ್ಲಿ ಕಾನ್‌ಸ್ಟೇಬಲ್ ರಾಚಪ್ಪ ಸೇರಿದಂತೆ ಐವರು ಪೊಲೀಸರು ಮೃತಪಟ್ಟಿದ್ದರು. ರಾಚಪ್ಪನವರ ಮಗನಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡುವುದಾಗಿ ಪೊಲೀಸ್ ಇಲಾಖೆ ಭರವಸೆ ನೀಡಿತ್ತಾದರೂ, ಈವರೆಗೂ ಉದ್ಯೋಗ ಕಲ್ಪಿಸಿಲ್ಲ. ಅದ್ದರಿಂದ, ಈ ಕುರಿತಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿದರು.

ADVERTISEMENT

ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಮೈಸೂರು ನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.

ಪ್ರಕರಣ:ರಾಮಾಪುರ ಪೊಲೀಸ್ ಠಾಣೆಯ ಮೇಲೆ ತನ್ನ 20 ರಿಂದ 30 ಸಹಚರರೊಂದಿಗೆ ದಾಳಿ ನಡೆಸಿದ್ದ ವೀರಪ್ಪನ್,ರಾಚಪ್ಪ ಸೇರಿದಂತೆ ಐವರು ಪೊಲೀಸರನ್ನು ಗುಂಡಿಕ್ಕಿ ಕೊಂದಿದ್ದ.‘ರಾಚಪ್ಪ ಅವರ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ, ಅವರ ಪುತ್ರ ನಂದೀಶ್‌ಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ಮಂಜೂರು ಮಾಡುವಂತೆ ಕೋರಿ ಪೊಲೀಸ್ ಮಹಾನಿರ್ದೇಶಕರ ಕಚೇರಿಯಿಂದ 2020ರ ಜೂನ್ 25ರಂದು ಪತ್ರ ಬರೆದಿದ್ದರೂ, ಸರ್ಕಾರ ಈವರೆಗೂ ಅದನ್ನು ಪರಿಗಣಿಸಿಲ್ಲ’ ಎಂಬುದು ಅರ್ಜಿದಾರರ ಆಕ್ಷೇಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.