ರಾಜರಾಜೇಶ್ವರಿನಗರ: ‘ದೊಡ್ಡ ಬಿದರಕಲ್ಲು ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ತೀವ್ರಗೊಂಡಿದ್ದು, ಅಗತ್ಯವಿರುವ ಕಡೆಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಬೇಕು’ ಎಂದು ಬಿಬಿಂಎಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಬೆಂಗಳೂರು ಜಲಮಂಡಳಿ ಹಾಗೂ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದರು.
ಯಶವಂತಪುರ ವಿಧಾನಸಭೆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಶಾಸಕ ಎಸ್.ಟಿ. ಸೋಮಶೇಖರ್ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ‘ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕು. ಸಮಸ್ಯೆ ಇದ್ದರೆ ಕೊಳವೆ ಬಾವಿಗಳನ್ನು ಕೊರೆಸುವ ಮೂಲಕ ಪರಿಹಾರ ಕಂಡುಕೊಳ್ಳಬೇಕು’ ಎಂದರು.
ಮಲ್ಲಸಂದ್ರ ವ್ಯಾಪ್ತಿಯಲ್ಲಿ ನಿವೇಶನಗಳಿಗೆ ಖಾತೆ ನೀಡುವುದು, ಉತ್ತರಹಳ್ಳಿ ರಸ್ತೆ ಕಾಮಗಾರಿ ಸೇರಿದಂತೆ 110 ಹಳ್ಳಿಗಳ ಯೋಜನೆಯ ಎಲ್ಲ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಮುಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ದರ್ಶನ್ ಕಾಲೇಜಿನ ಬಳಿಯಲ್ಲಿ ಅಂಡರ್ ಪಾಸ್ ಸೇತುವೆ ನಿರ್ಮಿಸಲು ರೈಲ್ವೆ ಇಲಾಖೆಗೆ ₹3.35 ಕೋಟಿ ಹಸ್ತಾಂತರ ಮಾಡಲಾಗುವುದು. ಕೊಮ್ಮಘಟ್ಟದಲ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಬಿಡಿಎ ನಿವೇಶನ ಖರೀದಿಸಲು ಆರ್ಥಿಕ ನೆರವು ನೀಡಲಾಗುವುದು ಎಂದು ತಿಳಿಸಿದರು.
ಶಾಸಕ ಎಸ್.ಟಿ. ಸೋಮಶೇಖರ್, ‘ಮಳೆ ಬಂದಾಗ ರಾಜಕಾಲುವೆ ನೀರು ತಗ್ಗು ಪ್ರದೇಶಗಳಿಗೆ ಹರಿಯದಂತೆ ಜಲಮಂಡಳಿಯ ಅಧಿಕಾರಿಗಳು ಯೋಜನೆ ರೂಪಿಸಬೇಕು ಎಂದು ಹೇಳಿದರು.
ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್, ಜಂಟಿ ಆಯುಕ್ತ ಅಜಯ್ ವಿ., ಮುಖ್ಯ ಎಂಜಿನಿಯರ್ ಬಿ.ಜಿ. ರಾಜೇಂದ್ರ ಪ್ರಸಾದ್, ಕಾರ್ಯನಿರ್ವಾಹಕ ಎಂಜಿನಿಯರ್ ಬಿ. ರಾಜಣ್ಣ, ಜಲಮಂಡಳಿಯ ಮುಖ್ಯ ಎಂಜಿನಿಯರ್ ಕೆ.ಎನ್. ಪರಮೇಶ್ವರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.