ADVERTISEMENT

ಹೊಯ್ಸಳ ಸಿಬ್ಬಂದಿ ವಿರುದ್ಧ ವಿಚಾರಣೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 18 ಜುಲೈ 2024, 16:31 IST
Last Updated 18 ಜುಲೈ 2024, 16:31 IST
<div class="paragraphs"><p>ಹೊಯ್ಸಳ</p></div>

ಹೊಯ್ಸಳ

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ಬೈಕ್‌ನಿಂದ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ನಿರಾಕರಿಸಿದ ಹೊಯ್ಸಳ ಸಿಬ್ಬಂದಿ ವಿರುದ್ಧ ವಿಚಾರಣೆಗೆ ಉತ್ತರ ವಿಭಾಗದ ಡಿಸಿಪಿ ಸೈದುಲ್ಲಾ ಅದಾವತ್‌ ಆದೇಶಿಸಿದ್ದಾರೆ.

ADVERTISEMENT

ಕಾನೂನು ಕಾಲೇಜೊಂದರ ವಿದ್ಯಾರ್ಥಿ ರಾಹುಲ್ ಗೌಡ ಅವರು ಸ್ನೇಹಿತರ ಮನೆಯಿಂದ ಸೋಮವಾರ ರಾತ್ರಿ ಬೈಕ್‌ನಲ್ಲಿ ವಾಪಸ್‌ ಬರುವ ವೇಳೆ ಯಶವಂತಪುರದ ತ್ರಿವೇಣಿ ರಸ್ತೆಯಲ್ಲಿ ಹಂಪ್ಸ್‌ ಬಳಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. ರಸ್ತೆ ಮಧ್ಯೆ ರಾಹುಲ್ ರಕ್ತಸ್ರಾವದಿಂದ ಬಳಲುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಹೊಯ್ಸಳ ವಾಹನ ಹಾಗೂ ಆಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ. ಆಂಬುಲೆನ್ಸ್ ಬರುವುದು ಸ್ವಲ್ಪ ತಡವಾಗಿದೆ. 

ಅಷ್ಟರಲ್ಲಿ ಘಟನಾ ಸ್ಥಳಕ್ಕೆ ಬಂದಿದ್ದ ಹೊಯ್ಸಳ ವಾಹನ ಸಿಬ್ಬಂದಿ ರಾಹುಲ್ ಅವರನ್ನು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲು ನಿರಾಕರಿಸಿದ್ದಾರೆ. ಸ್ಥಳೀಯರು ಎಷ್ಟೇ ಮನವಿ ಮಾಡಿದರೂ ಒಪ್ಪಲಿಲ್ಲ. ಕೊನೆಗೆ ಸಾರ್ವಜನಿಕರೊಬ್ಬರ ಕಾರಿನಲ್ಲಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಯಶವಂತಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಮಾನವೀಯತೆ ದೃಷ್ಟಿಯಿಂದ ಪೊಲೀಸ್‌ ಸಿಬ್ಬಂದಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಬೇಕಾಗಿತ್ತು. ಘಟನೆ ಕುರಿತು ಹೊಯ್ಸಳ ವಾಹನ ಸಿಬ್ಬಂದಿ ವಿರುದ್ಧ ವಿಚಾರಣೆಗೆ ಆದೇಶಿಸಲಾಗಿದೆ. ವರದಿ ಬಂದ ಬಳಿಕ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಆಸ್ಪತ್ರೆಯಲ್ಲಿ ವಿದ್ಯಾರ್ಥಿ ಚೇತರಿಸಿಕೊಳ್ಳುತ್ತಿದ್ದಾರೆ. ಅಪಘಾತ ಸಂಭವಿಸಿದ ಸಂದರ್ಭದಲ್ಲಿ ವಿದ್ಯಾರ್ಥಿ ಹೆಲ್ಮೆಟ್ ಧರಿಸಿರಲಿಲ್ಲ. ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು’ ಎಂದು ಡಿಸಿಪಿ ಸೈದುಲ್ಲಾ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.