ಬೆಂಗಳೂರು: ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿ, ಪೆಪ್ಪರ್ ಸ್ಪ್ರೇ ಮಾಡಿದ 13 ಆರೋಪಿಗಳನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ ₹3.20 ಲಕ್ಷ ನಗದು, ಮಚ್ಚು, ಆಟೊ, ಎರಡು ಕಾರು, ಆರು ದ್ವಿಚಕ್ರ ವಾಹನ, ಪೆಪ್ಪೇರ್ ಸ್ಪ್ರೇ, 13 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಶೋಧ ಆರಂಭಿಸಲಾಗಿದೆ.
ನವಿಲು ನಗರದ ಇಟ್ಟಿಗೆಗೂಡಿನಲ್ಲಿ ಕ್ಯಾಟ್ ರಾಜನ ಸಹಚರರು ಇಸ್ಪೀಟ್ ಅಡ್ಡೆ ನಡೆಸುತ್ತಿರುವ ಬಗ್ಗೆ ಮಾಹಿತಿ ಬಂದಿತ್ತು. ವಿಜಯನಗರ ಎಸಿಪಿ ಚಂದನ್ ನೇತೃತ್ವದಲ್ಲಿ ದಾಳಿ ನಡೆಸಿದ ವೇಳೆ 30ಕ್ಕೂ ಹೆಚ್ಚು ಜನರು ಇಸ್ಪೀಟ್ ಆಡುತ್ತಿದ್ದರು. ಪೊಲೀಸ್ ಸಿಬ್ಬಂದಿ ಮೇಲೆ ಮೊದಲು ಮಚ್ಚಿನಿಂದ ಹಲ್ಲೆ ನಡೆಸಲು ಯತ್ನಿಸಿದರು. ಬಳಿಕ ಪೆಪ್ಪರ್ ಸ್ಪ್ರೇ ಮಾಡುವ ಮೂಲಕ ತಪ್ಪಿಸಿಕೊಳ್ಳಲು ಯತ್ನಿಸಿದರು. ಕೆಲವರು ಹಣದ ಸಮೇತ ಪರಾರಿಯಾದರು ಎಂದು ಪೊಲೀಸರು ತಿಳಿಸಿದ್ದಾರೆ.
ಬ್ಯಾಡರಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.