ADVERTISEMENT

ಬೆಂಗಳೂರು ಕಂಬಳ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಅಕ್ಟೋಬರ್ 2024, 9:52 IST
Last Updated 21 ಅಕ್ಟೋಬರ್ 2024, 9:52 IST
<div class="paragraphs"><p>ಬೆಂಗಳೂರು ಕಂಬಳದ ದೃಶ್ಯ</p></div>

ಬೆಂಗಳೂರು ಕಂಬಳದ ದೃಶ್ಯ

   

ಪ್ರಜಾವಾಣಿ ಸಂಗ್ರಹ ಚಿತ್ರ

ಬೆಂಗಳೂರು: ಬೆಂಗಳೂರು: ‘ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ 25 ಮತ್ತು 26ರಂದು ಕಂಬಳ (ಕೋಣಗಳ ಓಟ) ಸ್ಪರ್ಧೆ ನಡೆಸಲು ಬೆಂಗಳೂರು ಕಂಬಳ ಸಮಿತಿಗೆ ಅನುಮತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಪ್ರಾಣಿ ದಯಾ ಸಂಘ ಪೆಟಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ (ಅ.22) ಮಂಗಳವಾರ ವಿಚಾರಣೆ ನಡೆಸಲಿದೆ.

ADVERTISEMENT

ಈ ಕುರಿತಂತೆ ಪೆಟಾ (ಪೀಪಲ್‌ ಫಾರ್‌ ಎ ಎಥಿಕಲ್‌ ಟ್ರೀಟ್‌ಮೆಂಟ್‌ ಆಫ್‌ ಅನಿಮಲ್ಸ್‌) ಕಂಪನಿಯ ಅಧಿಕೃತ ಪ್ರತಿನಿಧಿ ಖುಷ್ಬೂ ಗುಪ್ತ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ನಿಗದಿಗೊಳಿಸುವಂತೆ ಪೆಟಾ ಪರ ಹಾಜರಾಗಿದ್ದ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ, ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಮನವಿ ಮಾಡಿದರು. ಅರ್ಜಿಯನ್ನು ಪರಿಶೀಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಮಂಗಳವಾರಕ್ಕೆ (ಅ.22) ನಿಗದಿಗೊಳಿಸಿತು.

‘ಕಂಬಳ ಸ್ಪರ್ಧೆಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿಯ ಗ್ರಾಮೀಣ ಭಾಗ ಹೊರತುಪಡಿಸಿ ಬೇರೆಲ್ಲೂ ನಡೆಸಲು ಅನುಮತಿ ನೀಡಬಾರದು. ಪ್ರಾಣಿಗಳ ಮೇಲಿನ ಕ್ರೌರ್ಯ ನಿಷೇಧ ಕಾಯ್ದೆ–2017ರ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ ನಿರ್ದೇಶಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಅರ್ಜಿಯಲ್ಲಿ ಪಶು ಸಂಗೋಪನಾ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿ ಮತ್ತು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್‌ ಕುಮಾರ್ ರೈ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.