ಬೆಂಗಳೂರು: ಕೆಎಸ್‌ಆರ್‌ಪಿ (ರಾಜ್ಯ ಪೊಲೀಸ್ ಮೀಸಲು ಪಡೆ) ಕಾನ್‌ಸ್ಟೆಬಲ್ ಹುದ್ದೆ ನೇಮಕಾತಿ ಪರೀಕ್ಷೆಗೆ ನಕಲಿ ಅಭ್ಯರ್ಥಿ ಹಾಜರಾಗಿದ್ದ ಸಂಗತಿ ಪತ್ತೆಯಾಗಿದ್ದು, ಆತನಿಂದ ಪರೀಕ್ಷೆ ಬರೆಸಿದ್ದ ಅಸಲಿ ಅಭ್ಯರ್ಥಿ ವಿರುದ್ಧ ಹಲಸೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
‘ಕೆಎಸ್‌ಆರ್‌ಪಿ ಒಂದನೇ ಬೆಟಾಲಿಯನ್ ಸಹಾಯಕ ಕಮಾಂಡೆಂಟ್ ಎಂ.ಜಿ. ಸುರೇಶ್ ಅವರು ದೂರು ನೀಡಿದ್ದಾರೆ. ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದ ಆರೋಪದಡಿ ಅಸಲಿ ಅಭ್ಯರ್ಥಿ ಬೆಳಗಾವಿ ಜಿಲ್ಲೆ ಗೋಕಾಕ್ ತಾಲ್ಲೂಕಿನ ದಡೇರಹಟ್ಟಿಯ ಸಿದ್ದು ಕುರಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಕಾನ್‌ಸ್ಟೆಬಲ್ ಹುದ್ದೆಗೆ ಆರೋಪಿ ಸಿದ್ದು ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಬದಲು ಬೇರೊಬ್ಬರು ದೈಹಿಕ ಹಾಗೂ ಲಿಖಿತ ಪರೀಕ್ಷೆಗೆ ಹಾಜರಾಗಿದ್ದರು. ಉತ್ತಮ ಅಂಕ ಪಡೆದಿದ್ದರಿಂದ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸಿದ್ದು ಕುರಿ ಹೆಸರಿತ್ತು. ಇತ್ತೀಚೆಗೆ ಅಭ್ಯರ್ಥಿ ಬಗ್ಗೆ ಅಧಿಕಾರಿಗಳಿಗೆ ಅನುಮಾನ ಬಂದಿತ್ತು. ಪರಿಶೀಲನೆ ನಡೆಸಿದಾಗ ಆರೋಪಿ ಅಕ್ರಮ ಪತ್ತೆಯಾಗಿದೆ. ಅಭ್ಯರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರೆ, ಮತ್ತಷ್ಟು ಮಾಹಿತಿ ಸಿಗಲಿದೆ’ ಎಂದೂ ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.