ಬೆಂಗಳೂರು: ಅಶೋಕನಗರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಾಡ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಆರೋಪದಡಿ ನಾಲ್ಕು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸೋನು ಕುಮಾರ್ (32), ಸುನಿಲ್ ಕುಮಾರ್ (32), ಇರ್ಫಾನ್ (26), ಮುರುಳಿ ವಿನೋದ್ (47) ಬಂಧಿತರು.
'ಠಾಣಾ ವ್ಯಾಪ್ತಿಯ ಹೊಸೂರು ರಸ್ತೆಯಲ್ಲಿ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದರು. ಬಂಧಿತರಿಂದ ಎರಡು ನಾಡ ಪಿಸ್ತೂಲ್, ಐದು ಜೀವಂತ ಗುಂಡುಗಳು, ಎರಡು ಬೈಕ್ ಹಾಗೂ ಐದು ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿದೆ' ಎಂದು ಪೊಲೀಸರು ತಿಳಿಸಿದರು.
'ಸೋನುಕುಮಾರ್, ಸುನಿಲ್ ಹಾಗೂ ಇರ್ಫಾನ್ ಬಿಹಾರದಿಂದ ಪಿಸ್ತೂಲ್ ಖರೀದಿಸಿ, ಬೆಂಗಳೂರಿನಲ್ಲಿ ಅಕ್ರಮವಾಗಿ ಮಾರಾಟ ಮಾಡುವ ದಂಧೆ ನಡೆಸುತ್ತಿದ್ದರು. ಆಂಧ್ರಪ್ರದೇಶದ ಮದನಪಲ್ಲಿಯ ಮುರುಳಿ ಇವರಿಂದ ಪಿಸ್ತೂಲ್ ಹಾಗೂ ಐದು ಜೀವಂತ ಗುಂಡುಗಳನ್ನು ಖರೀದಿಸಿ ಅಕ್ರಮವಾಗಿ ಇಟ್ಟುಕೊಂಡಿದ್ದ. ಹಾಗಾಗಿ, ನಾಲ್ವರನ್ನೂ ಬಂಧಿಸಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತಲೆಮರೆಸಿಕೊಂಡಿರುವ ಇನ್ನೊಬ್ಬ ಆರೋಪಿಯ ಪತ್ತೆಕಾರ್ಯ ಮುಂದುವರಿದಿದೆ' ಎಂದೂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.