ADVERTISEMENT

ಪೂರ್ವ ಮುಂಗಾರು: ಮುಂಜಾಗ್ರತಾ ಕ್ರಮಕ್ಕೆ ಬಿಬಿಎಂಪಿ ಆಯುಕ್ತ ಗಿರಿನಾಥ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2024, 16:04 IST
Last Updated 18 ಮಾರ್ಚ್ 2024, 16:04 IST
ತುಷಾರ್‌ ಗಿರಿನಾಥ್‌
ತುಷಾರ್‌ ಗಿರಿನಾಥ್‌   

ಬೆಂಗಳೂರು: ಕುಡಿಯುವ ನೀರು ಸರಬರಾಜು, ಪೂರ್ವ ಮುಂಗಾರು ಮಳೆಗೆ ಮೊದಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಅನುಷ್ಠಾನದತ್ತ ಗಮನಹರಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಸೂಚಿಸಿದರು.

ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ ಅವರು, ‘ಕುಡಿಯುವ ನೀರಿನ ಸಮಸ್ಯೆ ಕುರಿತು ಆಯಾ ವಲಯ ವ್ಯಾಪ್ತಿಯಲ್ಲಿ ಜಲಮಂಡಳಿ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ನೋಂದಣಿಯಾಗಿರುವ ಟ್ಯಾಂಕರ್‌ಗಳನ್ನು ಈಗಾಗಲೇ ವಲಯವಾರು ನಿಯೋಜನೆ ಮಾಡಲಾಗಿದ್ದು, ಸಮಸ್ಯೆಯಿರುವ ಪ್ರದೇಶಗಳಿಗೆ ನೀರಿನ ಪೂರೈಕೆಗೆ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿನ 110 ಹಳ್ಳಿಗಳಿಗೆ ಸಂಬಂಧಿಸಿದಂತೆ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಜಲಮಂಡಳಿ ಹಾಗೂ ಪಾಲಿಕೆಯ ಸಹಾಯವಾಣಿಗೆ ನೀರಿನ ಸಂಬಂಧ ಬರುವ ದೂರುಗಳನ್ನು ಕಾಲಮಿತಿಯೊಳಗಾಗಿ ಇತ್ಯರ್ಥಪಡಿಸಲು ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

ಆಯಾ ವಲಯ ವ್ಯಾಪ್ತಿಯಲ್ಲಿ ಈಗಾಗಲೇ ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಲಾಗಿದೆ. ಅಲ್ಲಿ ಪ್ರವಾಹ ಉಂಟಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ರಾಜಕಾಲುವೆಗಳಲ್ಲಿ ಹೂಳೆತ್ತಿ ಸರಾಗವಾಗಿ ನೀರು ಹರಿದುಹೋಗುವಂತೆ ಮಾಡಬೇಕು ಎಂದರು.

ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಸುರೋಳ್ಕರ್ ವಿಕಾಸ್ ಕಿಶೋರ್‌ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.