ADVERTISEMENT

ಕೋವಿಡ್: ಬಿಎಂಸಿಆರ್‌ಐ ಆಸ್ಪತ್ರೆಗಳಲ್ಲಿ ಸಿದ್ಧತೆ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಿನಕ್ಕೆ ಸರಾಸರಿ 300 ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2023, 15:48 IST
Last Updated 22 ಡಿಸೆಂಬರ್ 2023, 15:48 IST
<div class="paragraphs"><p>ನಗರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗೆ ಮಾದರಿಗಳನ್ನು ಸಂಗ್ರಹಿಸಲಾಯಿತು</p></div>

ನಗರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗೆ ಮಾದರಿಗಳನ್ನು ಸಂಗ್ರಹಿಸಲಾಯಿತು

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಡಿಯ (ಬಿಎಂಸಿಆರ್‌ಐ) ಆಸ್ಪತ್ರೆಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. 

ADVERTISEMENT

ಸಂಸ್ಥೆಯಡಿ ವಿಕ್ಟೋರಿಯಾ, ವಾಣಿವಿಲಾಸ, ಮಿಂಟೊ ಕಣ್ಣಿನ ಆಸ್ಪತ್ರೆ, ಪಿಎಂಎಸ್‌ಎಸ್‌ವೈ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಕಾರ್ಯನಿರ್ವಹಿಸುತ್ತಿವೆ. ಈ ಆಸ್ಪತ್ರೆಗಳಲ್ಲಿ ‘ಸಾರಿ’ (ತೀವ್ರ ಉಸಿರಾಟದ ಸಮಸ್ಯೆ) ಹಾಗೂ ಐಎಲ್‌ಐ ಸಮಸ್ಯೆ (ಶೀತ, ಜ್ವರ ಮಾದರಿ ಅನಾರೋಗ್ಯ ಸಮಸ್ಯೆ) ಇರುವವರ ಗಂಟಲ ದ್ರವದ ಮಾದರಿ ಸಂಗ್ರಹಿಸಿ, ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ.

ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿರುವ ಸೂಕ್ಷ್ಮ ವಿಜ್ಞಾನ ವಿಭಾಗವು ದಿನಕ್ಕೆ ಸರಾಸರಿ 300 ಕೋವಿಡ್ ಪರೀಕ್ಷೆಗಳನ್ನು ನಡೆಸುತ್ತಿದೆ.

ನಗರದಲ್ಲಿ 2020ರ ಮಾರ್ಚ್‌ ತಿಂಗಳಲ್ಲಿ ಕೋವಿಡ್ ಕಾಣಿಸಿಕೊಂಡ ಬಳಿಕ ವಿಕ್ಟೋರಿಯಾ ಹಾಗೂ ಟ್ರಾಮಾ ಕೇರ್ ಸೆಂಟರ್‌ ಅನ್ನು ಕೋವಿಡ್ ಪೀಡಿತರ ಚಿಕಿತ್ಸೆಗೆ ಮೀಸಲಿಟ್ಟು, ಕೋವಿಡೇತರ ಚಿಕಿತ್ಸೆಗಳನ್ನು ಸ್ಥಗಿತ ಮಾಡಲಾಗಿತ್ತು. ಕೋವಿಡ್ ನಿಯಂತ್ರಣಕ್ಕೆ ಬಂದ ಬಳಿಕ ಕೋವಿಡೇತರ ಚಿಕಿತ್ಸೆ ಪ್ರಾರಂಭಿಸಲಾಗಿತ್ತು. 

ಪ್ರತ್ಯೇಕ ಕೊಠಡಿ: ‘ಕೋವಿಡ್ ತಪಾಸಣೆಗೆ ಹೊರರೋಗಿ ವಿಭಾಗದ ನಿರೀಕ್ಷಣಾ ಕೊಠಡಿ ಲಭ್ಯವಿದೆ. ಸಾರಿ ಹಾಗೂ ಐಎಲ್‌ಐ ಸಮಸ್ಯೆ ಹೊಂದಿರುವವರ ಗಂಟಲ ಮತ್ತು ಮೂಗಿನ ದ್ರವದ ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಒಂದು ವೇಳೆ ಕೋವಿಡ್ ಪ್ರಕರಣ ಹೆಚ್ಚಳವಾದರೆ ಆಸ್ಪತ್ರೆ ಆವರಣದಲ್ಲಿ ಪ್ರತ್ಯೇಕ ತಪಾಸಣಾ ಪ್ರದೇಶ ಗುರುತಿಸಲಾಗುತ್ತದೆ’ ಎಂದು ಬಿಎಂಸಿಆರ್‌ಐ ಡೀನ್ ಡಾ. ರಮೇಶ್ ಕೃಷ್ಣ ತಿಳಿಸಿದ್ದಾರೆ. 

‘ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿ ಅನುಸಾರ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಒದಗಿಸಲಾಗುತ್ತದೆ. ಅಗತ್ಯ ಪ್ರಮಾಣದಲ್ಲಿ ಔಷಧ ಲಭ್ಯವಿದೆ. ಕೋವಿಡ್ ಪೀಡಿತರ ದಾಖಲಾತಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಬ್ಲಾಕ್ ಗುರುತಿಸಲಾಗಿದೆ’ ಎಂದು ತಿಳಿಸಿದ್ದಾರೆ.

‘ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪುರುಷರು, ಮಹಿಳೆಯರು ಹಾಗೂ ಮಕ್ಕಳಿಗೆ ಪ್ರತ್ಯೇಕ ಕೊಠಡಿಗಳು ಲಭ್ಯವಿದೆ. ಅಲ್ಲಿ ಆರು ತೀವ್ರ ನಿಗಾ ಘಟಕ ಹಾಸಿಗೆಗಳಿವೆ. ಅಗತ್ಯ ಪ್ರಮಾಣದಲ್ಲಿ ವೈದ್ಯರು, ಶುಶ್ರೂಷಕರು ಹಾಗೂ ಸಿಬ್ಬಂದಿ ಇದ್ದಾರೆ. ವೈದ್ಯಕೀಯ ಆಮ್ಲಜನಕ, ಪಿಪಿಇ ಕಿಟ್ ಸೇರಿ ವಿವಿಧ ವೈದ್ಯಕೀಯ ಸಲಕರಣೆಗಳು ಇವೆ’ ಎಂದು ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.