ಬೆಂಗಳೂರು: ‘ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವನ್ನು ಸಾಮಾನ್ಯ ವಿಶ್ವವಿದ್ಯಾಲಯವನ್ನಾಗಿ ಪರಿವರ್ತಿಸಲು ಸರ್ಕಾರ ಉದ್ದೇಶಿಸಿರುವುದು ಖಂಡನೀಯ’ ಎಂದು ದಲಿತ ವಿದ್ಯಾರ್ಥಿ ಪರಿಷತ್‌ನ ರಾಜ್ಯ ಘಟಕದ ಅಧ್ಯಕ್ಷ ಶ್ರೀನಾಥ್ ಪೂಜಾರಿ ಆಕ್ಷೇಪ ವ್ಯಕ್ತಪಡಿಸಿದರು.
ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,‘ವಿಜಯಪುರದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ರಾಜ್ಯದ ಏಕೈಕ ಮಹಿಳಾ ವಿ.ವಿ. ‘ಇದನ್ನು ಸಾಮಾನ್ಯ ವಿಶ್ವವಿದ್ಯಾಲಯವಾಗಿ ಪುನರ್‌ರಚಿಸಲು ಉದ್ದೇಶಿಸಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥನಾರಾಯಣ ಸದನದಲ್ಲಿ ಉತ್ತರಿಸಿರುವುದು ಖಂಡನಾರ್ಹ’ ಎಂದರು.
‘ಈ ಹಿಂದೆ ಇದೇ ವಿಚಾರವನ್ನು ‘ಗಾಳಿ ಸುದ್ದಿ’ ಎಂದು ಸಚಿವ ಅಶ್ವತ್ಥನಾರಾಯಣ ಹಾಗೂ ಗೋವಿಂದ ಕಾರಜೋಳ ಹೇಳುವ ಮೂಲಕದಲಿತ ವಿದ್ಯಾರ್ಥಿ ಪರಿಷತ್ ಮೇಲೆ ಆಪಾದನೆ ಮಾಡಿದ್ದರು. ಈಗ ಸದನದಲ್ಲಿ ಅದು ಸತ್ಯವೆಂದು ಒಪ್ಪಿಕೊಂಡಿದ್ದಾರೆ. ಸರ್ಕಾರದ ಈ ಧೋರಣೆ ಮಹಿಳಾ ವಿರೋಧಿ ನಡೆಯಾಗಿದ್ದು, ಮಹಿಳೆಯರಿಗೆ ಶಿಕ್ಷಣ ಹೊರೆ ಎಂದು ಸರ್ಕಾರ ಭಾವಿಸಿದೆ. ಹೆಣ್ಣುಮಕ್ಕಳ ಶಿಕ್ಷಣ ಕಸಿಯುತ್ತಿರುವ ಸರ್ಕಾರಕ್ಕೆ ನಾಚಿಕೆ ಆಗಬೇಕು’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಸರ್ಕಾರ ಕೂಡಲೇ ಈ ನಿರ್ಧಾರವನ್ನು ಕೈಬಿಟ್ಟು, ವಿಶ್ವವಿದ್ಯಾಲಯವನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕು. ಇಲ್ಲದಿದ್ದರೆ, ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.