ADVERTISEMENT

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2022, 11:18 IST
Last Updated 9 ಏಪ್ರಿಲ್ 2022, 11:18 IST

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ದೀಪು ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.

‘ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ದೀಪು ಅವರನ್ನು ಮಾರ್ಚ್ 28ರಂದು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು’ ಎಂದು ಜೈಲಿನ ಮೂಲಗಳು ಹೇಳಿವೆ.

‘20 ಕೈದಿಗಳಿರುವ ಬ್ಯಾರಕ್‌ನಲ್ಲಿ (ಕೊಠಡಿ) ದೀಪು ಅವರನ್ನು ಇರಿಸಲಾಗಿತ್ತು. ಶನಿವಾರ ಬೆಳಿಗ್ಗೆ ಬ್ಯಾರಕ್‌ನಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ದೀಪು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದೂ ತಿಳಿಸಿವೆ.

ADVERTISEMENT

’ಬ್ಯಾರಕ್‌ನ ಶೌಚಾಲಯದ ಬಳಿ ಕಿಟಕಿ ಇದೆ. ಅದೇ ಕಿಟಕಿಗೆ ಬೆಡ್‌ಶೀಟ್‌ನಿಂದ ನೇಣು ಹಾಕಿಕೊಂಡು ದೀಪು ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇತಾಡುತ್ತಿದ್ದ ಮೃತದೇಹ ಗಮನಿಸಿದ್ದ ಕೈದಿಗಳು ಜೈಲಿನ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ನಂತರ, ಪರಪ್ಪನ ಅಗ್ರಹಾರ ಠಾಣೆ ಪೊಲೀಸರಿಗೆ ವಿಷಯ ತಿಳಿಸಿದೆವು’ ಎಂದೂ ಮೂಲಗಳು ಹೇಳಿವೆ.

‘ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ. ಸಾವಿನ ಬಗ್ಗೆ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ’ ಎಂದೂ ಜೈಲಿನ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.