ಬೆಂಗಳೂರು: ಖಾಸಗಿ ಆರೋಗ್ಯ ವಿಮೆಯಡಿ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಚಿಕಿತ್ಸೆ ಒದಗಿಸುವ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಸ್ತಾವಕ್ಕೆ ನಗರದ ಸರ್ಕಾರಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಪ್ರಮುಖರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಮಂಗಳವಾರ ಇಲ್ಲಿ ಇಲಾಖೆ ಅಧಿಕಾರಿಗಳು ಹಾಗೂ ಸರ್ಕಾರಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಸಭೆ ನಡೆಸಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಸಗಿ ಆರೋಗ್ಯ ವಿಮೆಯಡಿ ಚಿಕಿತ್ಸೆ ಒದಗಿಸುವ ಬಗ್ಗೆ ಚರ್ಚಿಸಿದರು.
‘ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ’, ‘ಯಶಸ್ವಿನಿ’ ಸೇರಿ ವಿವಿಧ ಸರ್ಕಾರಿ ಪ್ರಾಯೋಜಿತ ಆರೋಗ್ಯ ವಿಮೆಯಡಿ ಸರ್ಕಾರಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಖಾಸಗಿ ಆರೋಗ್ಯ ವಿಮಾ ಸಂಸ್ಥೆಗಳೊಂದಿಗೂ ಒಪ್ಪಂದ ಮಾಡಿಕೊಂಡು, ಚಿಕಿತ್ಸೆ ಒದಗಿಸಿದಲ್ಲಿ ಆಸ್ಪತ್ರೆಗಳ ಆರ್ಥಿಕ ಸಂಪನ್ಮೂಲ ಹೆಚ್ಚಲಿದೆ’ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.
‘ಖಾಸಗಿ ಆರೋಗ್ಯ ವಿಮೆಯಡಿ ಚಿಕಿತ್ಸೆ ನೀಡಲು ಪ್ರಾರಂಭಿಸಿದರೆ ವಿಮಾ ಕಂಪನಿಗಳು ಪಾವತಿಸಿದ ಹಣದಡಿ ಸೇವೆಯಲ್ಲಿನ ಸೌಲಭ್ಯ ಹಾಗೂ ಸೌಕರ್ಯಗಳನ್ನು ಇನ್ನಷ್ಟು ಉತ್ತಮ ಪಡಿಸಬಹುದು’ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದರು. ಇದಕ್ಕೆ ವೈದ್ಯಕೀಯ ಸಂಸ್ಥೆಗಳ ಮುಖ್ಯಸ್ಥರು ಸಹಮತ ವ್ಯಕ್ತಪಡಿಸಿದರು.
ಈಗಾಗಲೇ ಜಯದೇವ ಹೃದ್ರೋಗ ಸಂಸ್ಥೆ, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ, ಗ್ಯಾಸ್ಟ್ರೋ ಎಂಟರಾಲಜಿ ಸೈನ್ಸಸ್ ಆ್ಯಂಡ್ ಆರ್ಗನ್ ಟ್ರಾನ್ಸ್‌ಪ್ಲಾಂಟ್ ಸಂಸ್ಥೆಯಲ್ಲಿ (ಐಗಾಟ್) ಖಾಸಗಿ ಆರೋಗ್ಯ ವಿಮೆಯಡಿಯೂ ಚಿಕಿತ್ಸೆ ನೀಡಲಾಗುತ್ತಿದೆ. ಇದೇ ರೀತಿ, ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ ಎಲ್ಲ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಈ ವ್ಯವಸ್ಥೆ ಅಳವಡಿಸಿಕೊಳ್ಳಬೇಕು ಎಂದು ಚರ್ಚಿಸಲಾಯಿತು.
‘ಖಾಸಗಿ ಆರೋಗ್ಯ ವಿಮೆ ಹೊಂದಿರುವವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಪೂರಕವಾದ ವಾತಾವರಣ ಸೃಷ್ಟಿಸುವ ಅಗತ್ಯವಿದೆ. ಹೆಚ್ಚು ಸಮಯ ಕಾಯಿಸದೆ ಚಿಕಿತ್ಸೆ ನೀಡಬೇಕಿದೆ. ಈ ಸಂಬಂಧ ಮಾನವ ಸಂಪನ್ಮೂಲ ಹೆಚ್ಚಳದ ಬಗ್ಗೆಯೂ ಗಮನ ಹರಿಸಬೇಕಿದೆ. ಈ ವಿಮೆದಾರರಿಗೆ ವಿಶೇಷ ವಾರ್ಡ್‌ಗಳಲ್ಲಿ ಚಿಕಿತ್ಸೆ ಒದಗಿಸುವ ಅಗತ್ಯವಿದೆ’ ಎಂಬ ಅಭಿಪ್ರಾಯಗಳು ಸಭೆಯಲ್ಲಿ ವ್ಯಕ್ತವಾಯಿತು.
ಸಭೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆ, ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ (ಪಿಎಂಎಸ್‌ಎಸ್‌ವೈ), ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ, ಸಂಜಯ್ ಗಾಂಧಿ ಆಸ್ಪತ್ರೆ, ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ, ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ ಸೇರಿ ವಿವಿಧ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.