ಬೆಂಗಳೂರು: ‘ವೈದ್ಯಕೀಯ ಚಿಕಿತ್ಸೆಗೆ ಹೊರ ರಾಜ್ಯ, ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬೆಂಗಳೂರಿಗೆ ಬರುತ್ತಿದ್ದಾರೆ. ಆರೋಗ್ಯ ಪ್ರವಾಸೋದ್ಯಮಕ್ಕೆ ಸರ್ಕಾರ ಅಗತ್ಯ ಉತ್ತೇಜನ ನೀಡಲಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಆರೋಗ್ಯ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಇಲ್ಲಿನ ಪ್ರಮುಖ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಜತೆಗೆ ಸಭೆ ನಡೆಸಿದ ಅವರು, ಆರೋಗ್ಯ ಪ್ರವಾಸೋದ್ಯಮ ಬೆಳವಣಿಗೆಗೆ ಇರುವ ಅವಕಾಶಗಳ ಬಗ್ಗೆ ಚರ್ಚಿಸಿದರು.
‘ಸರ್ಕಾರದ ವತಿಯಿಂದ ಅಧಿಕೃತ ವೆಬ್ ಪೋರ್ಟಲ್ ಒಂದನ್ನು ಆರಂಭಿಸಿ, ಆ ಮೂಲಕ ಖಾಸಗಿ ಆಸ್ಪತ್ರೆಗಳ ಚಿಕಿತ್ಸೆಯ ಗುಣಮಟ್ಟದ ಬಗ್ಗೆ ಸರ್ಕಾರವೇ ‘ಕ್ರೆಡಿಟ್ ಪಾಯಿಂಟ್ಸ್’ ನೀಡುವ ವ್ಯವಸ್ಥೆ ರೂಪಿಸಬೇಕು’ ಎಂದು ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳು ಅಭಿಪ್ರಾಯ ವ್ಯಕ್ತಪಡಿಸಿದರು. ಇದಕ್ಕೆ ಸಚಿವರು, ಈ ಬಗ್ಗೆ ಹೆಚ್ಚಿನ ಚರ್ಚೆಗಳನ್ನು ನಡೆಸಿ, ನಿರ್ಣಯ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಬಳಿಕ ಮಾಧ್ಯಮಗಳ ಜತೆಗೆ ಮಾತನಾಡಿದ ಸಚಿವರು, ‘ಚಿಕಿತ್ಸೆಗಾಗಿ ಬರುವವರಿಗೆ ಇಲ್ಲಿಯ ಅತ್ಯಾಧುನಿಕ ಆರೋಗ್ಯ ಸೌಲಭ್ಯಗಳು ಹಾಗೂ ಚಿಕಿತ್ಸೆಯ ಬಗ್ಗೆ ಭರವಸೆ ಮೂಡಿಸಬೇಕಿದೆ. ಈ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳು ನೀಡುವ ಚಿಕಿತ್ಸೆಯ ಗುಣಮಟ್ಟದ ಬಗ್ಗೆ ಸರ್ಕಾರವೇ ಪ್ರಮಾಣೀಕರಣ ಮಾಡುವ ವ್ಯವಸ್ಥೆ ರೂಪಿಸಬೇಕಿದೆ‘ ಎಂದು ಅಭಿಪ್ರಾಯಪಟ್ಟರು.
‘ಆಗ ಜನರಿಗೂ ಆಸ್ಪತ್ರೆಗಳಲ್ಲಿನ ಚಿಕಿತ್ಸೆಯ ಬಗ್ಗೆ ವಿಶ್ವಾಸ ಮೂಡಲಿದೆ. ಈ ಕ್ರಮದಿಂದ ಬೆಂಗಳೂರಿನಲ್ಲಿ ಆರೋಗ್ಯ ಪ್ರವಾಸೋದ್ಯಮ ಬೆಳೆಯುವುದರ ಜತೆಗೆ ಬೆಂಗಳೂರು ಆರೋಗ್ಯ ನಗರವಾಗಿಯೂ ಮುನ್ನೆಲೆಗೆ ಬರಲಿದೆ’ ಎಂದರು.
‘ನಗರದಲ್ಲಿ ಉತ್ತಮ ಆಸ್ಪತ್ರೆಗಳಿವೆ. ನಿಗದಿತ ಅವಧಿಯಲ್ಲಿ ಗುಣಮಟ್ಟದ ಚಿಕಿತ್ಸೆಗಳು ದೊರೆಯುತ್ತಿವೆ. ವಿದೇಶಗಳಲ್ಲಿ ಚಿಕಿತ್ಸೆಗೆ ತಿಂಗಳಾನುಗಟ್ಟಲೆ ಕಾಯುವ ಪರಿಸ್ಥಿತಿಯಿದೆ. ಹೀಗಾಗಿ, ಆರೋಗ್ಯ ಪ್ರವಾಸೋದ್ಯಮದ ಮೂಲಕ ವಿದೇಶಿಗರನ್ನು ಸೆಳೆಯಬಹುದು. ಆರೋಗ್ಯ ಸೇವೆಗಳಿಗಾಗಿ ಬೆಂಗಳೂರಿಗೆ ಬರುವ ಜನರು ರಾಜ್ಯದ ಇತರ ಪ್ರವಾಸಿ ಸ್ಥಳಗಳಿಗೂ ಭೇಟಿ ನೀಡುತ್ತಾರೆ. ಇದರಿಂದ ರಾಜ್ಯದ ಪ್ರವಾಸೋದ್ಯಮವೂ ಅಭಿವೃದ್ಧಿ ಹೊಂದಲಿದೆ’ ಎಂದು ತಿಳಿಸಿದರು.
ಸಭೆಯಲ್ಲಿ ಮಣಿಪಾಲ್ ಆಸ್ಪತ್ರೆ, ನಾರಾಯಣ ಹೃದಯಾಲಯ, ಅಪೋಲೊ ಹೆಲ್ತ್ ಕೇರ್ ಸೇರಿ 50ಕ್ಕೂ ಹೆಚ್ಚು ಪ್ರಮುಖ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.