ADVERTISEMENT

ಬೆಂಗಳೂರು: ನೈಸ್‌ ಸಂಸ್ಥೆ ಪರ ಡಿಕೆಶಿ ನೀಡಿದ್ದ ಹೇಳಿಕೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2024, 16:03 IST
Last Updated 5 ನವೆಂಬರ್ 2024, 16:03 IST
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ನೈಸ್ ಭೂ ಸಂತ್ರಸ್ಥರ ರೈತರ ಹೋರಾಟ ಸಮಿತಿ ಸದಸ್ಯರು ಭಾಗವಹಿಸಿದ್ದರು
ಪ್ರಜಾವಾಣಿ ಚಿತ್ರ.
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ನೈಸ್ ಭೂ ಸಂತ್ರಸ್ಥರ ರೈತರ ಹೋರಾಟ ಸಮಿತಿ ಸದಸ್ಯರು ಭಾಗವಹಿಸಿದ್ದರು ಪ್ರಜಾವಾಣಿ ಚಿತ್ರ.   

ಬೆಂಗಳೂರು: ನೈಸ್‌ ಸಂಸ್ಥೆಯ ಪರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ನೀಡಿರುವ ಹೇಳಿಕೆಯನ್ನು ಕೂಡಲೇ ಹಿಂಪಡೆಯಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ, ನೈಸ್‌ ಭೂ ಸಂತ್ರಸ್ಥರ ರೈತರ ಹೋರಾಟ ಸಮಿತಿಯ ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

‘ಬಿಎಂಐಸಿ ಯೋಜನೆಯಲ್ಲಿ ನೈಸ್‌ ಸಂಸ್ಥೆಯ ಪಾಲುದಾರಿಕೆಯನ್ನು ರದ್ದುಗೊಳಿಸಬೇಕು. ನೈಸ್‌ ಸಂಸ್ಥೆಯ ಭೂಸ್ವಾಧೀನ ಹಾಗೂ ರಸ್ತೆ ನಿರ್ಮಾಣದ ಹಗರಣವನ್ನು ತನಿಖೆಗೊಳಪಡಿಸಿ, ಕಾನೂನು ಕ್ರಮ ಕೈಗೊಳ್ಳಬೇಕು. ರೈತರ ಗಮನಕ್ಕೆ ಬಾರದಂತೆ ಭೂಸ್ವಾಧೀನ ಮಾಡಿಕೊಂಡಿರುವ ಎಲ್ಲ ಪ್ರಕರಣಗಳನ್ನು ರದ್ದುಪಡಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

‘ನೈಸ್‌ ಅಕ್ರಮದ ಕುರಿತು ಸದನ ಸಮಿತಿ ಮತ್ತು ಸಂಪುಟ ಉಪಸಮಿತಿಗಳ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು (ಕೆಐಎಡಿಬಿ) ನೈಸ್‌ ಸಂಸ್ಥೆ ಜೊತೆ ಸೇರಿ ದರೋಡೆ ಮಾಡಿರುವ ಎಲ್ಲ ಹೆಚ್ಚುವರಿ ಭೂಮಿಯನ್ನು ಹಿಂಪಡೆದುಕೊಳ್ಳಬೇಕು. ಟೋಲ್‌ ಸಂಗ್ರಹಿಸುತ್ತಿರುವ ರಸ್ತೆಗೆ ಭೂಮಿ ಕಳೆದುಕೊಂಡ ರೈತರಿಗೆ ಹೆಚ್ಚಿನ ಪರಿಹಾರ ಹಾಗೂ ನಿವೇಶನ ನೀಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಕರ್ನಾಟಕ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಟಿ. ಯಶವಂತ, ಸದಸ್ಯೆ ಜೆ. ಗಾಯತ್ರಿ, ಬೆಂಗಳೂರು ನಗರ ಜಿಲ್ಲಾ ಘಟಕದ ನೈಸ್ ಭೂ ಸಂತ್ರಸ್ಥರ ರೈತರ ಹೋರಾಟ ಸಮಿತಿಯ ಅಧ್ಯಕ್ಷ ಎನ್. ವೆಂಕಟಚಲಯ್ಯ, ಪ್ರಧಾನ ಕಾರ್ಯದರ್ಶಿ ವೆಂಕಟಚಲಪ್ಪ, ಖಜಾಂಚಿ ಉಮಾಶಂಕರ್‌ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.