ADVERTISEMENT

ಬೆಂಗಳೂರು: ಪರವಾನಗಿ ಕಡ್ಡಾಯ ವಿರೋಧಿಸಿ ಬೀಡಿ, ಸಿಗರೇಟ್‌ ವ್ಯಾಪಾರಿಗಳ ಪ್ರತಿಭಟನೆ

ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪರವಾನಗಿ ಕಡ್ಡಾಯಕ್ಕೆ ವಿರೋಧ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2024, 14:40 IST
Last Updated 8 ಅಕ್ಟೋಬರ್ 2024, 14:40 IST
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಸಣ್ಣ ಬೀಡಿ, ಸಿಗರೇಟು ಮಾರಾಟಗಾರರ ಸಂಘದ ಸದಸ್ಯರು ಪಾಲ್ಗೊಂಡಿದ್ದರು      ಪ್ರಜಾವಾಣಿ ಚಿತ್ರ
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಸಣ್ಣ ಬೀಡಿ, ಸಿಗರೇಟು ಮಾರಾಟಗಾರರ ಸಂಘದ ಸದಸ್ಯರು ಪಾಲ್ಗೊಂಡಿದ್ದರು      ಪ್ರಜಾವಾಣಿ ಚಿತ್ರ   

ಬೆಂಗಳೂರು: ತಂಬಾಕು ಉತ್ಪನ್ನಗಳ ಮಾರಾಟ ಮಾಡುವ ವ್ಯಾಪಾರಿಗಳು ಕಡ್ಡಾಯವಾಗಿ ಪರವಾನಗಿ ಪಡೆದುಕೊಳ್ಳಬೇಕೆಂಬ ಕಾನೂನು ಜಾರಿಗೊಳಿಸಲು ಮುಂದಾಗಿರುವ ಸರ್ಕಾರದ ನಡೆಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ಸಣ್ಣ ಬೀಡಿ ಸಿಗರೇಟು ಮಾರಾಟಗಾರರ ಸಂಘದ ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಿ.ಎನ್. ಮುರಳಿ ಕೃಷ್ಣ ಮಾತನಾಡಿ, ‘ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ, ವಹಿವಾಟು, ಉತ್ಪಾದನೆ, ಪೂರೈಕೆ ಮತ್ತು ಹಂಚಿಕೆ ಕಾಯ್ದೆ–2003 (ಸಿಒಟಿಪಿ) ಅಡಿಯಲ್ಲಿ ಅಧಿಕಾರಿಗಳು ಸಂಘದ ಸದಸ್ಯರಿಗೆ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಹೊಸ ಕಾಯ್ದೆ ಜಾರಿಯಾದರೆ ತಂಬಾಕು ಉತ್ಪನ್ನ ಮಾರಾಟ ಮಾಡುವ ವ್ಯಾಪಾರಿಗಳು ಪ್ರತಿವರ್ಷ ಪರವಾನಗಿಯನ್ನು ನವೀಕರಿಸಬೇಕು. ಪರವಾನಗಿ ಪತ್ರವನ್ನು ಪ್ರದರ್ಶಿಸುವುದು, ಸಲಹೆ ಪುಸ್ತಕ ನಿರ್ವಹಣೆ ಮಾಡಬೇಕು. ಇಲ್ಲದಿದ್ದರೆ, ದಂಡ ಪಾವತಿಸಬೇಕೆಂಬ ನಿಯಮಗಳಿವೆ. ಇದಕ್ಕೆ ಚಿಲ್ಲರೆ ವ್ಯಾಪಾರಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ’ ಎಂದು ತಿಳಿಸಿದರು.

ADVERTISEMENT

‘ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪರವಾನಗಿ ಪಡೆಯಲು ವ್ಯಾಪಾರಿಗಳು ಭಾರಿ ಮೊತ್ತದ ಶುಲ್ಕ ಪಾವತಿಸುವುದು ಕಷ್ಟವಾಗಲಿದೆ. ಇದಕ್ಕೆ ಬೇಕಾದ ಪೂರಕ ದಾಖಲೆಗಳನ್ನು ಸಿದ್ಧಪಡಿಸಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣವಾಗಲಿದೆ. ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪರವಾನಗಿ ಕಡ್ಡಾಯಗೊಳಿಸುವ ನಗರಾಭಿವೃದ್ಧಿ ಇಲಾಖೆಯ ನಡೆಯು ಸುಲಲಿತ ವಹಿವಾಟು ಮತ್ತು ಉದ್ಯಮಶೀಲತೆಗೆ ಉತ್ತೇಜನ ನೀಡುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಶಯಗಳಿಗೆ ವಿರುದ್ಧವಾಗಿದೆ’ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.