ADVERTISEMENT

ಪಿಟಿಸಿಎಲ್‌: ಮರು ಪರಿಶೀಲನಾ ಅರ್ಜಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಜುಲೈ 2024, 21:27 IST
Last Updated 18 ಜುಲೈ 2024, 21:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕರ್ನಾಟಕ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) (ಕೆಲವು ಭೂಮಿಗಳ ವರ್ಗಾವಣೆ ನಿಷೇಧ– ಪಿಟಿಸಿಎಲ್‌) ಕಾಯ್ದೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪರಿಶಿಷ್ಟರಿಗೆ ನ್ಯಾಯ ಒದಗಿಸಲು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕು ಎಂದು ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ ಆಗ್ರಹಿಸಿದೆ.

‘ನೆಕ್ಕಂಟಿ ರಾಮಲಕ್ಷ್ಮಿ ಮತ್ತು ಕರ್ನಾಟಕ ಸರ್ಕಾರದ ಮಧ್ಯದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿನಿಂದ ಪರಿಶಿಷ್ಟರಿಗೆ ಅನ್ಯಾಯವಾಗಿದೆ. ಅದನ್ನು ಸರಿಪಡಿಸಲು ರಾಜ್ಯ ಸರ್ಕಾರ ಕಾಯ್ದೆಗೆ ತಂದಿರುವ ತಿದ್ದುಪಡಿಯಿಂದಲೂ ನ್ಯಾಯ ದೊರಕಿಲ್ಲ. 2017ರ ಹಿಂದೆ ವಜಾಗೊಂಡಿರುವ ಪ್ರಕರಣಗಳಿಗೆ ಈ ತಿದ್ದುಪಡಿ ಅನ್ವಯಿಸುವುದಿಲ್ಲ. ಶೇಕಡ 10ರಷ್ಟು ಪ್ರಕರಣಗಳು ಮಾತ್ರ ತಿದ್ದುಪಡಿಯ ವ್ಯಾಪ್ತಿಗೆ ಬರುತ್ತವೆ. ಇದರಿಂದ ಪರಿಶಿಷ್ಟರಿಗೆ ಅನ್ಯಾಯವೇ ಆಗಿದೆ’ ಎಂದು ಹೋರಾಟ ಸಮಿತಿಯ ಅಧ್ಯಕ್ಷ ಮಂಜುನಾಥ್‌ ಪತ್ರಿಕಾ ಹೇಳಿಕೆಯಲ್ಲಿ ದೂರಿದ್ದಾರೆ.

ಈ ಅನ್ಯಾಯವನ್ನು ಸರಿಪಡಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ನೆಕ್ಕಂಟಿ ರಾಮಲಕ್ಷ್ಮಿ ಮತ್ತು ಕರ್ನಾಟಕ ಸರ್ಕಾರದ ಮಧ್ಯದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ಪ್ರಶ್ನಿಸಿ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕು. ಅದು ಸಾಧ್ಯವಾಗದಿದ್ದರೆ, ಪ್ರಕರಣವನ್ನು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸುವಂತೆ ಅರ್ಜಿ ಸಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.