ಬೆಂಗಳೂರು: ‘ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಜತ ಮಹೋತ್ಸವವನ್ನು ಜೂನ್ 1ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಸಂವಾದದ ಮೂಲಕ ಉದ್ಘಾಟಿಸಲಿದ್ದಾರೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಪ್ರಧಾನಿ ಕಾರ್ಯಕ್ರಮ ಉದ್ಘಾಟಿಸುತ್ತಿರುವುದು ಹೆಮ್ಮೆಯ ಸಂಗತಿ’ ಎಂದರು.
‘ವೈದ್ಯಕೀಯ, ತಂತ್ರಜ್ಞಾನ ಹಾಗೂ ಕೈಗಾರಿಕೋದ್ಯಮಿಗಳ ಸಹಯೋಗದಲ್ಲಿ ಕೋವಿಡ್ ವಿರುದ್ಧ ನೂತನ ಆವಿಷ್ಕಾರಗಳನ್ನು ಕೈಗೊಳ್ಳಬೇಕೆಂಬ ಪ್ರಧಾನಿ ಆಶಯದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನೂತನ ಪ್ರಯೋಗಗಳು ನಡೆಯುತ್ತಿವೆ. ಐಐಐಟಿ, ಐಐಎಂ ಮತ್ತು ವೈದ್ಯಕೀಯ ಕಾಲೇಜುಗಳ ತಜ್ಞ ವೈದ್ಯರು, ಆಯಾ ರಂಗಗಳ ಪರಿಣತರ ನೆರವು ಪಡೆದು ಹೊಸ ಆವಿಷ್ಕಾರಕ್ಕೆ ಪ್ರಯತ್ನಿಸಲಾಗುತ್ತಿದೆ’ ಎಂದರು.
‘800 ಸಂಸ್ಥೆಗಳನ್ನು ಒಳಗೊಂಡ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2.5 ಲಕ್ಷ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. 23 ಸಾವಿರ ಬೋಧಕ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲರೂ ಕೊರೊನಾ ವಿರುದ್ಧದ ಸಮರದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.