ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಅಗತ್ಯ ಸಂಖ್ಯಾಬಲದ ಕೊರತೆಯ ಮಧ್ಯೆಯೂ ಉದ್ಯಮಿ ಡಿ. ಕುಪೇಂದ್ರ ರೆಡ್ಡಿ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದರೊಂದಿಗೆ ಈ ಚುನಾವಣೆ ಕುತೂಹಲಕಾರಿ ತಿರುವು ಪಡೆದುಕೊಂಡಿದೆ.
ಕುಪೇಂದ್ರ ರೆಡ್ಡಿ ಅವರನ್ನು ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಗಿದೆ. ಜೆಡಿಎಸ್ ಶಾಸಕರ ಜತೆಗೆ ಎಂ. ಸತೀಶ್ ರೆಡ್ಡಿ ಸೇರಿದಂತೆ ಬಿಜೆಪಿಯ ಕೆಲವರೂ ಸೂಚಕರಾಗಿ ನಾಮಪತ್ರಕ್ಕೆ ಸಹಿ ಮಾಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಕಾಂಗ್ರೆಸ್‌ನಿಂದ ಒಂದು ಸ್ಥಾನವನ್ನು ಕಿತ್ತುಕೊಳ್ಳುವ ತಂತ್ರಗಾರಿಕೆಯ ಭಾಗವಾಗಿ ರೆಡ್ಡಿ ಅವರನ್ನು ಕಣಕ್ಕಿಳಿಸಿವೆ.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಶಾಸಕ ಎಚ್.ಡಿ. ರೇವಣ್ಣ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರೊಂದಿಗೆ ತೆರಳಿ ಕುಪೇಂದ್ರ ರೆಡ್ಡಿ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಬುಧವಾರ ಮಧ್ಯಾಹ್ನದವರೆಗೂ ಯಾವುದೇ ತೀರ್ಮಾನಕ್ಕೆ ಬಂದಿರಲಿಲ್ಲ. ಬಿಜೆಪಿ ವರಿಷ್ಠರ ಸಂದೇಶ ಹೊತ್ತು ಬುಧವಾರ ಮಧ್ಯಾಹ್ನ ವಿಧಾನಸಭೆಯ ವಿರೋಧ ಪಕ್ಷದ ಮೊಗಸಾಲೆಗೆ ಬಂದಿದ್ದ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯ, ಎರಡೂ ಪಕ್ಷಗಳ ಪ್ರಮುಖರ ಜತೆ ಚರ್ಚಿಸಿದ್ದರು. ಆ ಬಳಿಕವೇ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸುವ ನಿರ್ಧಾರವನ್ನು ಅಂತಿಮಗೊಳಿಸಲಾಗಿತ್ತು.
ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳು ಖಾಲಿಯಾಗುತ್ತಿವೆ. ಸದ್ಯದ ಸಂಖ್ಯಾ ಬಲದಲ್ಲಿ ಕಾಂಗ್ರೆಸ್ ಮೂರು ಮತ್ತು ಬಿಜೆಪಿ ಒಂದು ಸ್ಥಾನಗಳನ್ನು ಪಡೆಯಲು ಅವಕಾಶವಿದೆ. ಜೆಡಿಎಸ್ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದರಿಂದ ತೀವ್ರ ಸ್ಪರ್ಧೆ ಸೃಷ್ಟಿಯಾಗಿದೆ.
ಕಾಂಗ್ರೆಸ್ 135 ಶಾಸಕರ ಬಲವನ್ನು ಹೊಂದಿದೆ. ಬಿಜೆಪಿ 66, ಜೆಡಿಎಸ್ 19, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜಿ. ಜನಾರ್ದನ ರೆಡ್ಡಿ, ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಮತ್ತು ಪಕ್ಷೇತರರಾದ ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ್ ಹಾಗೂ ಗೌರಿಬಿದನೂರು ಶಾಸಕ ಕೆ.ಪಿ.ಪುಟ್ಟಸ್ವಾಮಿ ಗೌಡ ಇದ್ದಾರೆ. ದರ್ಶನ್, ಲತಾ, ಪುಟ್ಟಸ್ವಾಮಿ ಕಾಂಗ್ರೆಸ್ ಜತೆ ಗುರುತಿಸಿಕೊಂಡಿದ್ದಾರೆ. ಜನಾರ್ದನ ರೆಡ್ಡಿ ಸಹ ಆರಂಭದಲ್ಲಿ ಕಾಂಗ್ರೆಸ್ ಜತೆಗಿರುವುದಾಗಿ ಹೇಳಿದ್ದರು. ಇತ್ತೀಚೆಗೆ, ಬಿಜೆಪಿ ಕಡೆ ಒಲವು ತೋರಿದ್ದಾರೆ.
ಒಬ್ಬ ಅಭ್ಯರ್ಥಿಯ ಗೆಲುವಿಗೆ 45 ಮತಗಳು ಬೇಕಾಗುತ್ತದೆ. ಮೈತ್ರಿಕೂಟದ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಬಿಜೆಪಿಯ 21 ಹೆಚ್ಚುವರಿ ಮತಗಳು ದೊರಕಲಿವೆ. ಹೆಚ್ಚುವರಿಯಾಗಿ ಅಗತ್ಯವಿರುವ ಐದು ಮತಗಳನ್ನು ಸೆಳೆಯಲು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಜಂಟಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಇದರಿಂದಾಗಿ ಕಾಂಗ್ರೆಸ್‌ಗೆ ಅಡ್ಡ ಮತದಾನದ ಭೀತಿಗೆ ಸಿಲುಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.